ಸಿರುಗುಪ್ಪ | ಹನುಮಂತಪ್ಪ ಹತ್ಯೆ ಖಂಡಿಸಿ ಮೇಣದಬತ್ತಿ ಹಿಡಿದು ಮೌನ ಪ್ರತಿಭಟನೆ
ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆಯ ಎಸ್. ಹನುಮಂತಪ್ಪ ಅವರ ಹತ್ಯೆಯನ್ನು ಖಂಡಿಸಿ ಹಾಗೂ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಮೇಣದಬತ್ತಿ ಬೆಳಗಿ ಮೌನ ಪ್ರತಿಭಟನೆ ನಡೆಸಲಾಯಿತು.
ಕಡಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿ ವಾಲ್ಮೀಕಿ ವೃತ್ತ ತಲುಪಿತು. ಪ್ರತಿಭಟನಾಕಾರರು ಹನುಮಂತಪ್ಪ ಅವರ ಭಾವಚಿತ್ರ ಹಾಗೂ ಮೇಣದಬತ್ತಿಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಕೋರಿದರು.
ಹತ್ಯೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಮುಂದೆ ಇಂತಹ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮೆರವಣಿಗೆಯಲ್ಲಿ ವಾಲ್ಮೀಕಿ ಸಮುದಾಯದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.