ಸಿರುಗುಪ್ಪ | ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ: ತಹಶೀಲ್ದಾರ್ ಗೌಸಿಯಾ ಬೇಗಂ
ಸಿರುಗುಪ್ಪ: ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳೀಯ ಮಟ್ಟದಲ್ಲೇ ಆಲಿಸಿ ಪರಿಹರಿಸಲು ಅಧಿಕಾರಿಗಳೇ ಗ್ರಾಮಕ್ಕೆ ಆಗಮಿಸಿದ್ದಾರೆ. ಜನರು ಈ ಅವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ಲಿಖಿತ ಅರ್ಜಿಗಳ ಮೂಲಕ ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಹಶೀಲ್ದಾರ್ ಗೌಸಿಯಾ ಬೇಗಂ ಹೇಳಿದರು.
ತಾಲ್ಲೂಕಿನ ಬಲಕುಂದಿ ಗ್ರಾಮದ ಬನ್ನಿ ಮಂಕಳಿ ದೇವಸ್ಥಾನದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ‘ಪ್ರಜಾಸೇವೆ–ಬಾಗಿಲಿಗೆ ಬಂತು ಸರ್ಕಾರ’ ಆಂದೋಲನದಲ್ಲಿ ಅವರು ಮಾತನಾಡಿದರು.
ಜನರು ಯಾವುದೇ ಹಿಂಜರಿಕೆಯಿಲ್ಲದೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಮ್ಮ ಅಹವಾಲುಗಳನ್ನು ಸಲ್ಲಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
109 ಅರ್ಜಿಗಳ ಸ್ವೀಕಾರ: ಆಂದೋಲನದಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಒಟ್ಟು 109 ಅರ್ಜಿಗಳು ಸಲ್ಲಿಕೆಯಾದವು. ತಾಲ್ಲೂಕು ಪಂಚಾಯಿತಿಗೆ ಅತಿ ಹೆಚ್ಚು 65 ಅರ್ಜಿಗಳು ಬಂದಿದ್ದು, ಕಂದಾಯ ಇಲಾಖೆಗೆ 25, ಆಹಾರ ಇಲಾಖೆಗೆ 9, ಲೋಕೋಪಯೋಗಿ ಇಲಾಖೆಗೆ 4, ಸರ್ವೇ ಇಲಾಖೆಗೆ 3 ಹಾಗೂ ಕೃಷಿ ಇಲಾಖೆಗೆ 2 ಅರ್ಜಿಗಳು ಸಲ್ಲಿಕೆಯಾದವು. ಸಿಡಿಪಿಒ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ತಲಾ ಒಂದು ಅರ್ಜಿ ಸಲ್ಲಿಕೆಯಾಯಿತು.
ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.