ಪಕ್ಷದ ನಿರ್ಧಾರವೇ ಅಂತಿಮ; ಸಚಿವ ಸ್ಥಾನ ನೀಡಿದರೆ ಸ್ವೀಕರಿಸುವೆ: ಶಾಸಕ ಜೆ.ಎನ್.ಗಣೇಶ್

Update: 2026-08-06 20:07 IST

ಬಳ್ಳಾರಿ/ಕಂಪ್ಲಿ: ಪಕ್ಷದಲ್ಲಿ ಶಿಸ್ತು ಅತ್ಯಂತ ಮುಖ್ಯವಾಗಿದ್ದು, ಹೈಕಮಾಂಡ್ ಸಚಿವ ಸ್ಥಾನ ನೀಡಲು ನಿರ್ಧರಿಸಿದರೆ ಅದನ್ನು ಸ್ವೀಕರಿಸುವೆ. ಪಕ್ಷದ ತೀರ್ಮಾನಕ್ಕೆ ಸದಾ ಬದ್ಧನಾಗಿರುತ್ತೇನೆ ಎಂದು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಸ್ಪಷ್ಟಪಡಿಸಿದರು.

ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂಪ್ಲಿ ಕ್ಷೇತ್ರದ ಜನರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದವರೆಗೆ ಪ್ರಾಮಾಣಿಕವಾಗಿ ಧ್ವನಿ ಎತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.

ಪಕ್ಷ ವಹಿಸುವ ಪ್ರತಿಯೊಂದು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವೆ. ಅಧಿಕಾರಕ್ಕಿಂತ ಪಕ್ಷದ ಶಿಸ್ತು ಮತ್ತು ಸಂಘಟನೆಗೆ ಹೆಚ್ಚಿನ ಮಹತ್ವ ನೀಡುತ್ತೇನೆ ಎಂದು ಹೇಳಿದರು.

ತುಂಗಭದ್ರಾ ಜಲಾಶಯದಲ್ಲಿ ಮಲೆನಾಡಿನಲ್ಲಿ ಉತ್ತಮ ಮಳೆಯ ಪರಿಣಾಮವಾಗಿ ಪ್ರಸ್ತುತ 64 ಟಿಎಂಸಿ ನೀರು ಸಂಗ್ರಹವಾಗಿರುವುದು ಸಂತಸದ ವಿಚಾರವಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಸೇರಿದಂತೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ರೈತರಿಗೆ ಇದು ಜೀವನಾಡಿಯಾಗಿದೆ ಎಂದು ಹೇಳಿದರು.

ಈ ಭಾಗದ ರೈತರ ಸಂಕಷ್ಟವನ್ನು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ರೈತರು ಈಗಾಗಲೇ ನಾಟಿ ಮಾಡಿರುವ ಸಸಿಗಳು ನೀರಿನ ಕೊರತೆಯಿಂದ ಒಣಗುತ್ತಿದ್ದು, ಕೂಡಲೇ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಬೆಳೆಗಳಿಗೆ ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ನೀರಾವರಿ ಸಲಹಾ ಸಮಿತಿ ಸಭೆಯನ್ನು ಮುನಿರಾಬಾದ್‌ನಲ್ಲಿಯೇ ನಡೆಸಿದರೆ ಮಾತ್ರ ರೈತರ ನೈಜ ಸಮಸ್ಯೆಗಳನ್ನು ಅರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಶ್ರೀನಿವಾಸರಾವ್, ಚನ್ನಬಸವರಾಜಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News