ಅ.16ರಂದು ಬಳ್ಳಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ
Update: 2025-10-14 20:35 IST
ಬಳ್ಳಾರಿ, ಅ.14: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅ.16ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 1.45 ಗಂಟೆಗೆ ಸಿರುಗುಪ್ಪ ತಾಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್‍ನ ಗ್ರಂಥಾಲಯಕ್ಕೆ ಭೇಟಿ ನೀಡಲಿದ್ದಾರೆ.
ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರುಗುಪ್ಪ ತಾಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ನಂತರ ಸಂಜೆ 4.45 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಪ್ರಗತಿ ಪರಿಶೀಲನೆ ನಡೆಸುವರು. ಬಳಿಕ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಅ.17ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.