ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಡಾ.ಎಂ.ಸಿ.ಸುಧಾಕರ್
Update: 2025-08-14 19:59 IST
ಬೆಂಗಳೂರು, ಆ. 14: ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕಕ್ಕೆ ಕ್ರಮ ವಹಿಸಲಾಗುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಂಡು ವಿದ್ಯಾರ್ಥಿಗಳ ಪಾಠ-ಪ್ರವಚನಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕೆ.ಗೋಪಾಲಯ್ಯ ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವರ ಪರವಾಗಿ ಉತ್ತರ ನೀಡಿದ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, 34,027 ಅತಿಥಿ ಶಿಕ್ಷಕರನ್ನು ಮೊದಲ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮಾಡಲಾಗಿದೆ ಎಂದರು.