ಚಾಮುಂಡಿ ಬೆಟ್ಟ ಕುರಿತ ಹೇಳಿಕೆ | ಡಿ.ಕೆ.ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ : ಬಿ.ವೈ.ವಿಜಯೇಂದ್ರ ಆಗ್ರಹ
Update: 2025-08-28 19:09 IST
ಬೆಂಗಳೂರು, ಆ.28: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿದ್ದಾರೆ. ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.
ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆ. ಆದರೆ, ಇದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ, ಇದು ಅಕ್ಷಮ್ಯ ಅಪರಾಧ. ಶಿವಕುಮಾರ್ ಸದನದಲ್ಲಿ ನಮಸ್ತೆ ಸದಾ ವತ್ಸಲೆ ಗೀತೆ ಹೇಳಿದರು. ತಕ್ಷಣ ದಿಲ್ಲಿ ಹೈಕಮಾಂಡಿನ ಒತ್ತಡ ಬಂದು ಕ್ಷಮಾಪಣೆ ಕೇಳುವ ಕೆಲಸ ಮಾಡಿದ್ದಾರೆ ವಿಜಯೇಂದ್ರ ತಿಳಿಸಿದರು.