×
Ad

ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಅಭಿಯಾನಕ್ಕೆ ಚಾಲನೆ

Update: 2026-03-01 01:36 IST

ಬೆಂಗಳೂರು : ದೇಶದಲ್ಲಿ ಬಾಲಕಿಯರ ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲು ಮುಂದಾಗಿರುವ ಸರಕಾರ ಈಗ ಗರ್ಭಕಂಠ ಕ್ಯಾನ್ಸರ್ ತಡೆಗೆ ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್‌ಪಿವಿ) ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಕೇಂದ್ರ ಸರಕಾರದ ಆಶಯದಂತೆ ರಾಜ್ಯದಲ್ಲಿಯೂ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದರು. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೆಬ್‌ಕ್ಯಾಸ್ಟ್ ಮೂಲಕ ಕಾರ್ಯಕ್ರಮ ವೀಕ್ಷಿಸಲಾಯಿತು.

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ.ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಮಿಷನ್ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಮೆನನ್, ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್, ಕಿದ್ವಾಯಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಹಾಜರಿದ್ದರು.

14 ವರ್ಷ ಮೇಲ್ಪಟ್ಟ ವಯಸ್ಸಿನ ಸುಮಾರು 1.15 ಕೋಟಿ ಹುಡುಗಿಯರಿಗೆ ಸರಕಾರಿ ಆರೋಗ್ಯ ಸೌಲಭ್ಯಗಳಲ್ಲಿ, ಆಯುಷ್ಮಾನ್ ಆರೋಗ್ಯ ಮಂದಿರಗಳು (ಪ್ರಾಥಮಿಕ ಆರೋಗ್ಯ ಕೇಂದ್ರಗಳು), ಸಮುದಾಯ ಆರೋಗ್ಯ ಕೇಂದ್ರಗಳು, ಉಪ-ಜಿಲ್ಲಾ ಮತ್ತು ಜಿಲ್ಲಾ ಆಸ್ಪತ್ರೆಗಳು ಹಾಗೂ ಸರಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಲಸಿಕೆಯನ್ನು ಹಾಕಲಾಗುತ್ತದೆ. ಈ ಅಭಿಯಾನವು ಮೂರು ತಿಂಗಳ ಅವಧಿ ನಡೆಯಲಿದ್ದು, ಸಮರೋಪಾದಿಯಲ್ಲಿ ಕೈಗೊಂಡು ನಿಗದಿಪಡಿಸಿದ ಬಾಲಕಿಯರಿಗೆ ಲಸಿಕೆ ನೀಡಲಾಗುತ್ತದೆ.

ಮಹಿಳೆಯರಲ್ಲಿ ಕ್ಯಾನ್ಸರ್ ಸಂಬಂಧಿತ ಕಾಯಿಲೆಗೆ ಪ್ರಮುಖ ಕಾರಣಗಳಲ್ಲಿ ಒಂದಾದ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟಲು ಹ್ಯೂಮನ್ ಪ್ಯಾಪಿಲೋಮವೈರಸ್ (ಎಚ್‌ಪಿವಿ) ಲಸಿಕೆ ನೀಡಲಾಗುತ್ತದೆ. ನಾಡಿನಾದ್ಯಂತ ಹುಡುಗಿಯರು ಮತ್ತು ಮಹಿಳೆಯರ ದೀರ್ಘಕಾಲೀನ ಆರೋಗ್ಯವನ್ನು ಕಾಪಾಡುವಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಲಿದೆ. ಮುಂದಿನ ದಿನಗಳಲ್ಲಿ ಈ ಅಭಿಯಾನವನ್ನು ಎಲ್ಲೆಡೆ ವಿಸ್ತರಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News