ಸಾಂದರ್ಭಿಕ ಚಿತ್ರ | PC : Gemini AI

ಬೆಂಗಳೂರು : ಕಾರಿನಲ್ಲಿ ಅಕ್ರಮವಾಗಿ ಸ್ಫೋಟಕ ವಸ್ತುಗಳಾದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್‌ ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ದಾಬಸ್‍ಪೇಟೆ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, 600 ಜಿಲೆಟಿನ್ ಕಡ್ಡಿಗಳನ್ನು ಹಾಗೂ 100 ಡಿಟೋನೇಟರ್‌ ಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದ್ದು, ಆತ ನೆಲಮಂಗಲ ತಾಲೂಕಿನ ಜಾಜೂರು ಬಳಿ ಕಾರಿನಲ್ಲಿ ಆಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಾಗಾಟ ಮಾಡಲಾಗುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದಿದ್ದ ಪೊಲೀಸರು, ಕಾರ್ಯಾಚರಣೆ ನಡೆಸಿ ಕಾರನ್ನು ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಅದರಲ್ಲಿ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್‍ಗಳು ಪತ್ತೆಯಾಗಿವೆ.

ದಾಬಸ್‍ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಅಕ್ರಮ ಕಲ್ಲುಗಣಿಗಾರಿಕೆಗಾಗಿ ಈ ಸ್ಫೋಟಕಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಪೊಲೀಸ್ ವಿಚಾರಣೆಯ ವೇಳೆ ಆರೋಪಿ ಶಿವಶಂಕರ್ ನಿಖರ ಮಾಹಿತಿ ನೀಡಲಿಲ್ಲ. ಹೀಗಾಗಿ ಪೊಲೀಸರು ಆತನನ್ನು ಬಂಧಿಸಿ ಸ್ಫೋಟಕಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಶಿವಶಂಕರ್ ವಿರುದ್ಧ ಸ್ಪೋಟಕ ವಸ್ತುಗಳ ಕಾಯ್ದೆ ಮತ್ತು ಬಿಎನ್‍ಎಸ್‍ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಸ್ಪೋಟಕ ಸಾಗಾಟದ ಮೂಲ, ಸಾಗಾಟದ ಉದ್ದೇಶ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ದಾಬಸ್ ಪೇಟೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor