ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
"ಟನಲ್ ರಸ್ತೆ ವಿಚಾರದಲ್ಲಿ ನಾನು ತಾಂತ್ರಿಕ ತಜ್ಞ ಅಲ್ಲ, ತೇಜಸ್ವಿ ಸೂರ್ಯ ಕೂಡ ತಜ್ಞರಲ್ಲ"
ಡಿಸಿಎಂ ಡಿ.ಕೆ. ಶಿವಕುಮಾರ್ (Photo:X/@DKShivakumar)
ಬೆಂಗಳೂರು: ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಟನಲ್ ರಸ್ತೆ ವಿಚಾರದಲ್ಲಿ ನಾನು ತಾಂತ್ರಿಕ ತಜ್ಞ ಅಲ್ಲ. ತೇಜಸ್ವಿ ಸೂರ್ಯ ಕೂಡ ತಜ್ಞರಲ್ಲ. ಅದಕ್ಕಾಗಿಯೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವೇ ಇದೆ ಎಂದು ಹೇಳಿದರು.
ತೇಜಸ್ವಿ ಸೂರ್ಯ ನಗರ ರೈಲು ಯೋಜನೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ಮಾಡಲಿ, ಅದರಲ್ಲಿ ತಪ್ಪೇನು ಇಲ್ಲ. ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಕೇಂದ್ರ ರೈಲ್ವೆ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಅವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು? ಎಂದು ಶಿವಕುಮಾರ್ ಪ್ರಶ್ನಿಸಿದರು.
ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಹಾಗೂ ಅಶೋಕ್ ಹೊರತಾಗಿ ಉಳಿದ ಯಾವುದೇ ನಾಯಕರು ಈ ಬಗ್ಗೆ ಮಾತನಾಡುತ್ತಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ ಎಂದು ಅವರು ತಿಳಿಸಿದರು.
ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರವಾಗಿ ಸಚಿವರು ಚರ್ಚೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅನಗತ್ಯ ಮಾತನಾಡಿ ದಣಿವಾಗುವುದು ಬೇಡ ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ವರದಿ ಬಳಿಕ ದಿನಾಂಕ ನಿಗದಿ:
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನ.20ರಂದು ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಚೇರಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆಯೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ಜಾಗದ ಕಾಗದ ಪತ್ರ ಸಿದ್ಧವಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಕಚೇರಿಗಳ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರು, ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಆವರು ದಿನಾಂಕ ನಿಗದಿ ಮಾಡುತ್ತಾರೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.
ಶ್ರೀರಾಮುಲು ಕೊಟ್ಟ ಹಣವನ್ನೇ ಬಿಹಾರಕ್ಕೆ ನೀಡಿದ್ದೇವೆ:
ಬಿಹಾರ ಚುನಾವಣೆಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ 300 ಕೋಟಿ ರೂ.ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಮಾಜಿ ಸಚಿವ ಬಿ.ಶ್ರೀರಾಮುಲು ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೆ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ಲೇವಡಿ ಮಾಡಿದರು.
ಸಚಿವರು, ಶಾಸಕರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ:
ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಭೆ ಕುರಿತು ಮಾಹಿತಿ ನಿಡಿದ ಶಿವಕುಮಾರ್, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತೇವೆ ಎಂದು ತಿಳಿಸಿದರು.