×
Ad

ಬಿಕ್ಲು ಶಿವು ಕೊಲೆ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಬೈರತಿ ಬಸವರಾಜ್

Update: 2025-12-24 21:15 IST

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಕೋರಿ ಮತ್ತೊಮ್ಮೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಕರಣದ 5ನೇ ಆರೋಪಿ ಬಿ.ಎ. ಬಸವರಾಜ ಅಲಿಯಾಸ್ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರವಷ್ಟೇ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ, ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಬುಧವಾರ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಭಾರತಿನಗರ ಠಾಣೆ ಪೊಲೀಸರನ್ನು ಪ್ರತಿವಾದಿಯನ್ನಾಗಿಸಲಾಗಿದ್ದು, ಅರ್ಜಿಯು ನ್ಯಾಯಮೂರ್ತಿ ಜಿ. ಬಸವರಾಜ ಅವರ ರಜಾಕಾಲದ ನ್ಯಾಯಪೀಠದ ಮುಂದೆ ಶುಕ್ರವಾರ (ಡಿ.26) ವಿಚಾರಣೆಗೆ ನಿಗದಿಯಾಗಿದೆ.

ಪ್ರಕರಣವೇನು?

ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ರಾತ್ರಿ ಬಿಕ್ಲು ಶಿವನ ಕೊಲೆಯಾಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್‌ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್‌, ಕಿರಣ್‌, ವಿಮಲ್‌, ಅನಿಲ್‌ ಮತ್ತು ಬೈರತಿ ಬಸವರಾಜ್‌ ವಿರುದ್ಧ ಭಾರತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆಗೊಂಡಿತ್ತು.

ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಬಂಧನ ಭೀತಿಯಿಂದ ಹೈಕೋರ್ಟ್‌ ಮೊರೆ ಹೋಗಿದ್ದರು. ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಬೈರತಿ, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದರು. ಬೈರತಿ ಬಸವರಾಜ್ ಅವರನ್ನು ಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು.

ಆನಂತರ, ಬೈರತಿ ಬಸವರಾಜ್ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣಕ್ಕೆ ಮಧ್ಯಂತರ ಆದೇಶ ತೆರವುಗೊಳಿಸುವಂತೆ ಕೋರಿ ಸಿಐಡಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಮಧ್ಯೆ, ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಬೈರತಿ ಬಸವರಾಜ್, ನಿರೀಕ್ಷಣಾ ಜಾಮೀನು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಪ್ರಕರಣದಲ್ಲಿ ಬೈರತಿ ಬಸವರಾಜ್ ಸೇರಿ ಐವರು ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (ಕೊಕಾ) ಅನ್ವಯಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನೂ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ವಿಚಾರಣೆ ನಡೆಸಿದ್ದ ಹೈಕೋರ್ಟ್, ಆರೋಪಿಗಳ ವಿರುದ್ಧ ಕೊಕಾ ಅನ್ವಯಿಸಿದ್ದ ಆದೇಶವನ್ನು ಡಿಸೆಂಬರ್ 19ರಂದು ರದ್ದುಪಡಿಸಿತ್ತಲ್ಲದೆ, ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇನ್ನು ಭಾರತಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೈರತಿ ಬಸವರಾಜ್ ಹಿಂಪಡೆದ ಕಾರಣ ಆ ಅರ್ಜಿಯೂ ವಜಾಗೊಂಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಹ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ನಿರಾಕರಿಸಿದ್ದರಿಂದ, ಬಂಧನ ಭೀತಿಯಿಂದ ಮತ್ತೊಮ್ಮೆ ಬೈರತಿ ಬಸವರಾಜ್ ಹೈಕೋರ್ಟ್ ಕದ ತಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News