ಬೆಂಗಳೂರು  : ಮಕ್ಕಳ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳೊಂದಿಗೆ ಕೆಲಕಾಲ ಸಮಯ ಕಳೆದರು. ಈ ವೇಳೆ, ಮಕ್ಕಳಿಗೆ ಗುಲಾಬಿ ಹೂ ಹಾಗೂ ಚಾಕೊಲೇಟ್‍ಗಳನ್ನು ನೀಡಿ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.

ನಂತರ ಮಕ್ಕಳು, ಅವರ ಪೋಷಕರು ಹಾಗೂ ವೈದ್ಯರೊಂದಿಗೆ ಮಾತುಕತೆ ನಡೆಸಿದ ಸಿಎಂ ಡಿ.ಕೆ.ಶಿವಕುಮಾರ್, ಕ್ಯಾನ್ಸರ್‍ನಿಂದ ಬಳಲುತ್ತಿದ್ದರೂ ಮಕ್ಕಳ ಕಣ್ಣುಗಳಲ್ಲಿನ ಭರವಸೆ ಮತ್ತು ಆತ್ಮವಿಶ್ವಾಸ ತಮ್ಮನ್ನು ಮೂಕವಿಸ್ಮಿತರನ್ನಾಗಿಸಿತು ಎಂದರು.

ಪ್ರತಿಯೊಂದು ಮಗುವಿನಲ್ಲೂ ಅಪಾರ ಪ್ರತಿಭೆ ಮತ್ತು ಸಾಮಥ್ರ್ಯವಿದೆ. ಕಷ್ಟದ ಸಂದರ್ಭದಲ್ಲಿಯೂ ಧೈರ್ಯದಿಂದ ಮುನ್ನಡೆಯುತ್ತಿರುವ ಈ ಮಕ್ಕಳ ಹೋರಾಟ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಯುವಜನರಷ್ಟೇ ಅಲ್ಲ, ಒಂದು, ಎರಡು, ಐದು ಹಾಗೂ 10 ವರ್ಷದೊಳಗಿನ ಪುಟ್ಟ ಮಕ್ಕಳಲ್ಲಿಯೂ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿ. ಇಂತಹ ಮಕ್ಕಳಿಗೆ ಅಗತ್ಯವಿರುವ ಎಲ್ಲ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲು ಸರಕಾರ ಏನು ಮಾಡಬೇಕು ಎಂಬುದರ ಬಗ್ಗೆ ಗಮನ ಹರಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕ್ಯಾನ್ಸರ್ ಚಿಕಿತ್ಸೆಗೆಂದು ಎಲ್ಲರೂ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಬರುವ ಅನಿವಾರ್ಯತೆ ತಪ್ಪಬೇಕು. ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತುಮಕೂರು, ಮೈಸೂರು, ಬಳ್ಳಾರಿ, ಕಲಬುರಗಿ ಹಾಗೂ ರಾಯಚೂರು ಸೇರಿದಂತೆ ಹಲವು ಕಡೆಗಳಲ್ಲಿ ಚಿಕಿತ್ಸಾ ವ್ಯವಸ್ಥೆ ಆರಂಭಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಈ ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಇನ್ನು, ಕಿದ್ವಾಯಿ ಆಸ್ಪತ್ರೆಯ ಆವರಣದಲ್ಲಿ ರೋಗಿಗಳನ್ನು ನೋಡಿಕೊಳ್ಳಲು ನಾಡಿನ ವಿವಿಧ ಭಾಗದಿಂದ ಆಗಮಿಸಿದ್ದ ತಾಯಂದಿರ ಪಕ್ಕ ಕುಳಿತ ಮುಖ್ಯಮಂತ್ರಿಗಳು ಯೋಗ ಕ್ಷೇಮ ವಿಚಾರಿಸಿದರು. ಈ ವೇಳೆ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯ, ವೈದ್ಯರ ನಡವಳಿಕೆ ಬಗ್ಗೆ ಪೋಷಕರನ್ನು ವಿಚಾರಿಸಿದ ಸಿಎಂ, ನಿಮ್ಮ, ನಿಮ್ಮ ಜಿಲ್ಲೆಗಳಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕಿದ್ವಾಯಿ ಆಸ್ಪತ್ರೆಯಲ್ಲಿ 200 ಹೆಚ್ಚುವರಿ ಹಾಸಿಗೆ: ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೆಚ್ಚುವರಿಯಾಗಿ 200 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಮಕ್ಕಳೊಂದಿಗೆ ಬರುವ ತಾಯಂದಿರು ಹಾಗೂ ಕುಟುಂಬದ ಸದಸ್ಯರಿಗೆ ವಸತಿ ಕಲ್ಪಿಸಲು 3 ಎಕರೆ ಜಾಗದ ಬೇಡಿಕೆಯನ್ನು ಪರಿಶೀಲಿಸಿ ಶೀಘ್ರದಲ್ಲೇ ಈ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಪೋಷಕರಿಗೂ ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇರಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ವರ್ಷಕ್ಕೆ 3.5 ಲಕ್ಷ ರೋಗಿಗಳಿಗೆ ಚಿಕಿತ್ಸೆ: ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಂದಲೂ ರೋಗಿಗಳು ಚಿಕಿತ್ಸೆಗಾಗಿ ಕಿದ್ವಾಯಿಗೆ ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 3.5 ಲಕ್ಷ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಪ್ರತಿದಿನ ಸರಾಸರಿ ಒಂದು ಸಾವಿರ ಮಂದಿ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇಷ್ಟೊ ದು ದೊಡ್ಡ ಸಂಖ್ಯೆಯ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಿರುವುದು ವಿಶೇಷ. ವೈದ್ಯರು ಮತ್ತು ಸಿಬ್ಬಂದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ರೋಬೋಟಿಕ್ ಯಂತ್ರಗಳಿಗೆ ಸಂಪುಟ ಅಸ್ತು: ಕಿದ್ವಾಯಿ ಆಸ್ಪತ್ರೆಯ ವೈದ್ಯಕೀಯ ಸೌಲಭ್ಯಗಳನ್ನು ಮತ್ತಷ್ಟು ಉನ್ನತೀಕರಿಸಲು ಸರಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಒಂದು ರೋಬೋಟಿಕ್ ಯಂತ್ರ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಂದು ರೋಬೋಟಿಕ್ ಯಂತ್ರ ಸೇರಿದಂತೆ ಅಗತ್ಯ ವೈದ್ಯಕೀಯ ಉಪಕರಣಗಳ ಖರೀದಿಗೆ ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ದೇಶದಲ್ಲೇ ಗೌರವಾನ್ವಿತ ಆಸ್ಪತ್ರೆಯಾಗಿರುವ ಕಿದ್ವಾಯಿಯಲ್ಲಿ ಇನ್ನಷ್ಟು ಉತ್ತಮ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor