ಶ್ರೀರಾಮಪುರ–ಮಂತ್ರಿ ಮಾಲ್ ಮೆಟ್ರೋ ಸಂಪರ್ಕ ಪಾದಚಾರಿ ಸುರಂಗ ಮಾರ್ಗಕ್ಕೆ ಭೂಮಿಪೂಜೆ
5.5 ಕೋಟಿ ರೂ. ವೆಚ್ಚದಲ್ಲಿ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣ; ಬಿನ್ನಿಪೇಟೆಯಲ್ಲಿ ಸ್ಕೈವಾಕ್ ನಿರ್ಮಾಣಕ್ಕೂ ಯೋಜನೆ: ದಿನೇಶ್ ಗುಂಡೂರಾವ್
ಬೆಂಗಳೂರು: ಶ್ರೀರಾಮಪುರ, ಸ್ವತಂತ್ರ ಪಾಳ್ಯ ಕಡೆಯಿಂದ ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದವರೆಗಿನ ಪಾದಚಾರಿ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಈ ಸುರಂಗ ಮಾರ್ಗ ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿತ್ತು. ಕಳೆದ ಚುನಾವಣೆಯ ವೇಳೆ ಕಾಮಗಾರಿ ಕೈಗೊಳ್ಳುವುದಾಗಿ ನೀಡಿದ್ದ ಭರವಸೆಯನ್ನು ಈಗ ಈಡೇರಿಸುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು.
ಹಲವಾರು ಬಾರಿ ಪ್ರಯತ್ನಿಸಿದರೂ ತಾಂತ್ರಿಕ ಕಾರಣಗಳಿಂದ ಕಾಮಗಾರಿ ಆರಂಭಿಸಲು ಸಾಧ್ಯವಾಗಿರಲಿಲ್ಲ. ಜನರ ಸುರಕ್ಷತೆ ಹಾಗೂ ಅನುಕೂಲದ ದೃಷ್ಟಿಯಿಂದ ಈ ಸುರಂಗ ಮಾರ್ಗ ಅತ್ಯಂತ ಅಗತ್ಯವಾಗಿತ್ತು. ಈಗಾಗಲೇ ಓಕಳಿಪುರಂನಲ್ಲಿ ಅಂಡರ್‌ಪಾಸ್ ನಿರ್ಮಿಸಲಾಗಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದರು.
5.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಸುರಂಗ ಮಾರ್ಗವು ಆರು ತಿಂಗಳೊಳಗೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಅಲ್ಲದೆ, ಬಿನ್ನಿಪೇಟೆ ಪ್ರದೇಶದಲ್ಲಿಯೂ ಸ್ಕೈವಾಕ್ ನಿರ್ಮಾಣದ ಅಗತ್ಯವಿದ್ದು, ಶೀಘ್ರದಲ್ಲೇ ಅದನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಸಂಸದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ರೈಲ್ವೆ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.