ಬೆಂಗಳೂರು : ಅಕ್ರಮ ವಲಸೆ ತಡೆಗಟ್ಟುವ ಸಂಬಂಧ ಮೂರು ತಿಂಗಳೊಳಗೆ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ ಎನ್ನಲಾದ ಬಾಂಗ್ಲಾದೇಶದ ಪ್ರಜೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ನಾಗೇಂದ್ರಪ್ಪ ಟಿ. ಎಂಬವರ ವಿರುದ್ಧ ದಾಖಲಾಗಿದ್ದ ಎರಡು ಎಫ್‌ಐಆರ್‌ಗಳನ್ನು ಶುಕ್ರವಾರ ರದ್ದುಪಡಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ. ಪ್ರಕರಣ ರದ್ದು ಕೋರಿ ನಾಗೇಂದ್ರಪ್ಪ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಪೀಠ, ಬೆಳ್ಳಂದೂರು ಮತ್ತು ವರ್ತೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಎರಡೂ ಪ್ರಕರಣಗಳನ್ನು ರದ್ದುಪಡಿಸಿದೆ.

ಇದೇ ವೇಳೆ, ತಮ್ಮ ಬಂಧನವನ್ನು ಪ್ರಶ್ನಿಸಿ ಹಾಗೂ ಕಾನೂನುಬಾಹಿರವಾಗಿ ವೈಯಕ್ತಿಕ ಸ್ವಾತಂತ್ರ್ಯವನ್ನು ಕಸಿದುಕೊಂಡಿದ್ದಕ್ಕಾಗಿ ಪರಿಹಾರ ಕೋರಿ ನಾಗೇಂದ್ರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅಕ್ರಮ ವಲಸೆಯನ್ನು ನಿಭಾಯಿಸಲು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಆದೇಶದ ಪ್ರತಿ ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳೊಳಗೆ ಸಮಿತಿಗಳನ್ನು ರಚಿಸಬೇಕು. ಈ ಸಂಬಂಧದ ಅನುಪಾಲನಾ ವರದಿಯನ್ನು ಹೈಕೋರ್ಟ್‌ನ ರಿಜಿಸ್ಟ್ರಿಗೆ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor