×
Ad

ಬೆಂಗಳೂರು| ಆರ್.ಆರ್.ನಗರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ಆರೋಪ: 9 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Update: 2025-11-11 21:06 IST

ಬೆಂಗಳೂರು: ರಾಜರಾಜೇಶ್ವರಿ ನಗರ (ಆರ್.ಆರ್.ನಗರ) ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಆರೋಪದ ಮೇಲೆ 9 ಮಂದಿ ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 13 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

2019-2021ರವರೆಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ 6 ವಾರ್ಡ್‍ಗಳಲ್ಲಿ ರಸ್ತೆ, ಪಾದಚಾರಿ ಮಾರ್ಗ, ಒಳಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಸುಮಾರು 250 ಕೋಟಿ ರೂ.ನಷ್ಟು ಅಕ್ರಮ ನಡೆದಿದೆ ಎಂದು ಆರೋಪಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು 2019-2021ರ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಾಲಿಕೆಯ ಟೆಕ್ನಿಕಲ್ ವಿಜಿಲೆನ್ಸ್ ಸೆಲ್ ಅಂಡರ್ ಕಮಿಷನರ್ ವಿಭಾಗದ ಮುಖ್ಯ ಇಂಜಿನಿಯರ್ ದೊಡ್ಡಯ್ಯ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ಗಳಾದ ಸತೀಶ್, ಶಿಲ್ಪಾ, ಭಾರತಿ, ಬಸವರಾಜ್, ಸಿದ್ದರಾಮಯ್ಯ, ಉಮೇಶ್ ಸೇರಿದಂತೆ ಒಟ್ಟು 9 ಅಧಿಕಾರಿಗಳ ಕಚೇರಿ, ನಿವಾಸಗಳಲ್ಲಿ ಶೋಧ ನಡೆಸಲಾಗಿದೆ ಎಂದು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಆರೋಪಿತ ಅಧಿಕಾರಿಗಳಿಗೆ ಸಂಬಂಧಿಸಿದ ನಿವಾಸಗಳು, ಗ್ರಾಮೀಣಾಭಿವೃದ್ಧಿ ನಿಗಮ ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ದಾಳಿಯಲ್ಲಿ ಕೆಲವು ಟೆಂಡರ್ ದಾಖಲೆಗಳು ಲಭ್ಯವಾಗಿದ್ದು, ಈ ಬಗ್ಗೆ ಪರಿಶೀಲನೆ ಮುಂದುವರೆದಿದೆ ಎಂದು ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News