ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫೈ; ಕೇಂದ್ರ ಸರಕಾರದ ಅನುಮತಿಗಾಗಿ ಶೀಘ್ರ ಪ್ರಸ್ತಾವ ಸಲ್ಲಿಸಲು ಮಧು ಬಂಗಾರಪ್ಪ ಸೂಚನೆ
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಸಲ್ಲಿಸಬೇಕಾದ ಪ್ರಸ್ತಾವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆ, ಕೇಂದ್ರ ಸರಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವದಲ್ಲಿರಬೇಕಾದ ಅಗತ್ಯ ದಾಖಲೆಗಳು ಹಾಗೂ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.
ಕೇಂದ್ರ ಸರಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಪ್ರಸ್ತಾವ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆಯೂ ಚರ್ಚೆ ನಡೆಯಿತು. ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯದೊಂದಿಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಸಚಿವರು ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೇಮಂತ್ ಎನ್., ಸಿಸಿಎಫ್ ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.