ಎಸ್‌ಐಆರ್ ಗೊಂದಲ ವಿರೋಧಿಸಿ ಚುನಾವಣಾ ಆಯೋಗಕ್ಕೆ ಮುತ್ತಿಗೆ; ಜಾಗೃತ ಕರ್ನಾಟಕ ಕಾರ್ಯಕರ್ತರ ವಶಕ್ಕೆ
ಬೆಂಗಳೂರು : ಎಸ್‌ಐಆರ್ ಪ್ರಕ್ರಿಯೆಯಿಂದ ರಾಜ್ಯದಲ್ಲಿ ಲಕ್ಷಾಂತರ ಮತದಾರರು ಹಾಗೂ ಸಾವಿರಾರು ಬಿಎಲ್‌ಓಗಳು ಗೊಂದಲ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿ, ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಧರಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ತೆರಳಿದ್ದ ಕಾರ್ಯಕರ್ತರು, ಎಸ್‌ಐಆರ್ ಪ್ರಕ್ರಿಯೆಯಿಂದ ತಳಮಟ್ಟದಲ್ಲಿ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದ ಸ್ಪಷ್ಟ ಮಾರ್ಗಸೂಚಿಗಳನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ಆದರೆ, ಚುನಾವಣಾ ಆಯೋಗದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಕಾರ್ಯಕರ್ತರನ್ನು ಒಳಗೆ ಪ್ರವೇಶಿಸಲು ಅವಕಾಶ ನೀಡದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ಎರಡನೇ ಹಂತದಲ್ಲಿ ಇನ್ನಷ್ಟು ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನೂ ಬಂಧಿಸಿ, ಎಲ್ಲರನ್ನು ಮೈಸೂರು ರಸ್ತೆಯ ಸಿಎಆರ್ ಕೇಂದ್ರದ ಮೈದಾನಕ್ಕೆ ಕರೆದೊಯ್ಯಲಾಗಿದೆ.