ಮಾಜಿ ಸಚಿವ ರಾಮಚಂದ್ರ ಗೌಡ ನಿಧನಕ್ಕೆ ವಿಜಯೇಂದ್ರ ಸಂತಾಪ
ಬೆಂಗಳೂರು: ಬಿಜೆಪಿಯ ಹಿರಿಯ ಮುಖಂಡ ಹಾಗೂ ಕರ್ನಾಟಕ ಸರ್ಕಾರದ ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಾಮಚಂದ್ರ ಗೌಡರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ತಿಳಿಸಿದ್ದಾರೆ.
ರಾಮಚಂದ್ರ ಗೌಡ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಶಾಸಕ ಕೆ. ಗೋಪಾಲಯ್ಯ ಸಂತಾಪ
ಮಾಜಿ ಸಚಿವ ರಾಮಚಂದ್ರ ಗೌಡ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಶಾಸಕ ಕೆ. ಗೋಪಾಲಯ್ಯ ಅವರು, "ರಾಮಚಂದ್ರ ಗೌಡ ಅವರು ಸರಳ, ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದರು. ಪಕ್ಷದ ಸಂಘಟನೆ ಹಾಗೂ ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ರಾಜ್ಯ ರಾಜಕಾರಣ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ" ಎಂದು ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬಸ್ಥರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.