ಭೀಮಣ್ಣ ಖಂಡ್ರೆ ನಿಧನ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಸಂತಾಪ
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಚಿವರು, ಕರ್ನಾಟಕದ ಹಿರಿಯ ರಾಜಕಾರಣಿಗಳು ಹಾಗೂ ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷರಾದ ಶತಾಯುಷಿ ಶ್ರೀ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಮಾಜಸೇವೆಗೆ ಬದುಕನ್ನೇ ಸಮರ್ಪಿಸಿದ ಲೋಕನಾಯಕನ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಶರಣ ಚಿಂತನೆ, ಮಾನವೀಯತೆ ಮತ್ತು ಮೌಲ್ಯಾಧಾರಿತ ರಾಜಕಾರಣದ ಪ್ರತೀಕವಾಗಿದ್ದ ಭೀಮಣ್ಣ ಖಂಡ್ರೆ ಅವರ ಸೇವೆಗಳು ಚಿರಸ್ಮರಣೀಯ ಎಂದು ಅವರು ತಿಳಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟ, ಹೈದರಾಬಾದ್ ಕರ್ನಾಟಕ ವಿಮೋಚನೆ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಮುಂಚೂಣಿಯಲ್ಲಿ ನಿಂತು ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಹೋರಾಡಿದ ನಾಯಕತ್ವವು ಅವರನ್ನು ಜನಮನದ ನಾಯಕರನ್ನಾಗಿಸಿತು ಎಂದು ಸ್ಮರಿಸಿದರು.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗ, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಟಿ.ಎ. ನಾರಾಯಣಗೌಡ ಅವರು ಪ್ರಾರ್ಥಿಸಿದ್ದಾರೆ.