×
Ad

5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ : ಸಂಸದ ಸಾಗರ್ ಖಂಡ್ರೆ

ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ; ಜಿಲ್ಲೆಯಲ್ಲಿ 2.13 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

Update: 2026-06-29 18:28 IST

ಬೀದರ್: ಪೋಲಿಯೋ ಕಾಯಿಲೆ ತಡೆಗಟ್ಟಲು ಪೋಲಿಯೋ ಲಸಿಕೆಯೇ ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು.

ನಗರದ ವಿಸ್ಡಮ್ ಶಾಲೆಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದಲ್ಲಿ ಕೊನೆಯ ಪೋಲಿಯೋ ಪ್ರಕರಣವು 2011ರಲ್ಲಿ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದ್ದು, ಕಳೆದ 15 ವರ್ಷಗಳಿಂದ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ದಾಖಲಾಗಿಲ್ಲ ಎಂದು ಅವರು ತಿಳಿಸಿದರು.

ನಮ್ಮ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿ ವರ್ಷ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹೀಗಾಗಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪಾಲಕರಿಗೆ ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಭಾರತವು 2014ರಲ್ಲಿ ಪೋಲಿಯೋ ಮುಕ್ತ ರಾಷ್ಟ್ರವಾಗಿ ಘೋಷಿಸಲ್ಪಟ್ಟಿದೆ. ಈ ಸಾಧನೆಯನ್ನು ಮುಂದುವರಿಸಲು ದೇಶ, ರಾಜ್ಯ ಮತ್ತು ಜಿಲ್ಲೆಯಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಾಣಿಸದಂತೆ ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧ್ಯಾನೇಶ್ವರ್ ನೀರಗುಡೆ ಮಾತನಾಡಿ, ಜೂನ್ 28ರಂದು ಬೂತ್‌ಗಳ ಮೂಲಕ ಲಸಿಕೆ ನೀಡಲಾಗುವುದು. ಜೂನ್ 29ರಿಂದ ಜುಲೈ 1ರವರೆಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆಯಿಂದ ವಂಚಿತರಾದ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳನ್ನು ಒಳಗೊಂಡಂತೆ 5 ವರ್ಷದೊಳಗಿನ 2,13,213 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 996 ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, 2,154 ಲಸಿಕೆದಾರರು ಹಾಗೂ 216 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜೊತೆಗೆ 11 ಮೊಬೈಲ್ ತಂಡಗಳು ಹಾಗೂ 70 ಟ್ರಾನ್ಸಿಟ್ ಪಾಯಿಂಟ್‌ಗಳ ಮೂಲಕ ಶೇ.100ರಷ್ಟು ಲಸಿಕಾಕರಣ ಗುರಿ ಸಾಧಿಸಲಾಗುವುದು ಎಂದು ಮಾಹಿತಿ ನೀಡಿದರು.

ವಿಸ್ಡಮ್ ಶಾಲೆಯ ಅಧ್ಯಕ್ಷ ಎಂ.ಡಿ. ಆಸಿಫೋದಿನ್ ಮಾತನಾಡಿ, ಶಾಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿಯಾಗಿದೆ. ಕಾರ್ಯಕ್ರಮ ಯಶಸ್ವಿಯಾಗಲು ಹಾಗೂ ಸಮುದಾಯದ ಪ್ರತಿಯೊಬ್ಬ ಫಲಾನುಭವಿಗೂ ತಲುಪಲು ಶಾಲೆಯ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕಿ, ಡಾ.ಇಂದುಮತಿ ಪಾಟೀಲ್, ವಿಸ್ಡ್ಂ ಶಾಲೆಯ ಕಾರ್ಯದರ್ಶಿ ಸಲಾವುದ್ದಿನ್, ಮಹಾನಗರ್‌ ಪಾಲಿಕೆಯ ಚೇರಮನ್ ಎಂ.ಡಿ.‌ಗೌಸ್, ಸಿಎಂಸಿಯ ಕೌನ್ಸಲರ್‌ಗಳಾದ ಚೇತನಾ ಮೋಹನ್, ಎಂ.ಡಿ. ಕಲೀಫ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಶಿವಶಂಕರ್ ಬಿ., ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ರಾಜಶೇಖರ್ ಪಾಟೀಲ್‌,‌ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅನೀಲ್ ಚಿಂತಾಮಣಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕೀರಣ್ ಪಾಟೀಲ್ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಸ್.ಕೆ.ಬೊಮ್ಮಾ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News