ಔರಾದ್ | ಬಿಸಿಯೂಟ ಸೇವಿಸಿ 69 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು
ಔರಾದ್ : ತಾಲೂಕಿನ ಜಮಲಾಪುರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 69 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಜಮಲಾಪುರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 94 ವಿದ್ಯಾರ್ಥಿಗಳ ದಾಖಲೆ ಇದ್ದು, ಮಂಗಳವಾರ 69 ವಿದ್ಯಾರ್ಥಿಗಳು ಹಾಜರಿದ್ದರು. ಬಿಸಿಯೂಟ ಸೇವಿಸಿದ ಬಳಿಕ 2–3 ವಿದ್ಯಾರ್ಥಿಗಳಿಗೆ ತಲೆನೋವು, ಹೊಟ್ಟೆನೋವು ಹಾಗೂ ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಔರಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.
ನಂತರ ಇತರ ವಿದ್ಯಾರ್ಥಿಗಳಲ್ಲಿಯೂ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳ ಪೈಕಿ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ವಿದ್ಯಾರ್ಥಿಗಳಿಗೆ ಔರಾದ್ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿ, ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಆಧರಿಸಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಈ ಕುರಿತು ಮಧ್ಯಾಹ್ನದ ಉಪಹಾರ ಯೋಜನೆಯ ಆಯುಕ್ತರಿಗೆ ಪತ್ರ ಬರೆದಿರುವ ಆಯೋಗದ ಅಧ್ಯಕ್ಷ ಶಶಿಧರ್ ಎಸ್. ಕೋಸಂಬೆ, ಔರಾದ್ ತಾಲ್ಲೂಕಿನ ಜಮಲಾಪುರ್ ಸರ್ಕಾರಿ ಶಾಲೆಯಲ್ಲಿ ಸುಮಾರು 80 ಮಕ್ಕಳಿಗೆ ಹೊಟ್ಟೆನೋವು ಕಾಣಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಅಂಶ ಮಾಧ್ಯಮಗಳಲ್ಲಿ ಪ್ರಕಟವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಪತ್ರ ತಲುಪಿದ ತಕ್ಷಣವೇ ಸಂಬಂಧಪಟ್ಟ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಿಸಿ ಊಟದಿಂದ ಮಕ್ಕಳಿಗೆ ಉಂಟಾಗುವ ತೊಂದರೆಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಅವರು ಸೂಚಿಸಿದ್ದಾರೆ. ಜೊತೆಗೆ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಐದು ದಿನಗಳೊಳಗೆ ಆಯೋಗಕ್ಕೆ ವರದಿ ಸಲ್ಲಿಸುವಂತೆ ಕೋರಿದ್ದಾರೆ.