×
Ad

Aurad | ಜೋಜನಾ ಗ್ರಾಪಂನಲ್ಲಿ ಅವ್ಯವಹಾರ ಆರೋಪ : ತನಿಖೆಗೆ ಆಗ್ರಹ

Update: 2026-07-10 16:44 IST

ಔರಾದ್ : ತಾಲೂಕಿನ ಜೋಜನಾ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ, ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಇಂಡಿಯನ್ ಕಾಂಗ್ರೆಸ್ ಬ್ರಿಗೇಡ್ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ, 2024-26ರ ಅವಧಿಯ 15ನೇ ಹಣಕಾಸು ಯೋಜನೆಯಡಿ ಕೈಗೊಂಡ ಕಾಮಗಾರಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಹಲವು ಕಾಮಗಾರಿಗಳನ್ನು ಕೇವಲ ದಾಖಲೆಗಳಲ್ಲಿ ಪೂರ್ಣಗೊಳಿಸಿದಂತೆ ತೋರಿಸಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ ಎಂದು ಉಲ್ಲೇಖಿಸಲಾಗಿದೆ.

ಕಾಮಗಾರಿಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪರಿಶೀಲಿಸಿ, ಸಾರ್ವಜನಿಕ ನಿಧಿಯ ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಬೋಗಸ್ ಬಿಲ್ಲುಗಳನ್ನು ಸೃಷ್ಟಿಸಿ ಸರ್ಕಾರಕ್ಕೆ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಸಂಬಂಧಿತ ಗುತ್ತಿಗೆದಾರರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ, ಗ್ರಾಮ ಪಂಚಾಯಿತಿಯಲ್ಲಿ ಪಾರದರ್ಶಕ ಆಡಳಿತಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಇಂಡಿಯನ್ ಕಾಂಗ್ರೆಸ್ ಬ್ರಿಗೇಡ್‌ನ ರಾಜ್ಯಾಧ್ಯಕ್ಷ ಅನಿಲಕುಮಾರ್ ನಿರ್ಮಳೆ ಹಾಗೂ ದಿನೇಶ್ ಶಿಂಧೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News