Aurad | ವಿಬಿ-ಜಿ ರಾಮ್ ಜಿ ಯೋಜನೆ ಕುರಿತು ಕಾರ್ಮಿಕರಿಗೆ ಜಾಗೃತಿ
ಔರಾದ್: ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಯೋಜನೆಯಡಿ ದಿನಗೂಲಿಯನ್ನು 370 ರೂ. ನಿಂದ 382 ರೂ.ಗೆ ಹೆಚ್ಚಿಸಲಾಗಿದೆ. ಜೊತೆಗೆ ವಾರ್ಷಿಕ ಉದ್ಯೋಗ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದೆ ಎಂದು ತಾಲೂಕು ಪಂಚಾಯತ್ ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್ ತಿಳಿಸಿದರು.
ತಾಲೂಕಿನ ಗುಡಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ವಿಬಿ-ಜಿ ರಾಮ್ ಜಿ ಯೋಜನೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯು ಗ್ರಾಮೀಣ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಲು ಹಾಗೂ ಉದ್ಯೋಗ ಸೃಷ್ಟಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದರು.
ಒಂದು ಗ್ರಾಮೀಣ ಉದ್ಯೋಗ ಖಾತರಿ ಕಾರ್ಡ್ ಹೊಂದಿರುವ ಕುಟುಂಬವು ವರ್ಷಕ್ಕೆ ಸುಮಾರು 47,750 ರೂ. ವರೆಗೆ ಆದಾಯ ಗಳಿಸುವ ಅವಕಾಶವಿದ್ದು, ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಪ್ರಮುಖ ಅಂಶಗಳು, ಸೌಲಭ್ಯಗಳು ಹಾಗೂ ಪ್ರಯೋಜನಗಳ ಕುರಿತು ಪೋಸ್ಟರ್‌ಗಳ ಮೂಲಕ ಕೂಲಿ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಕಾಯಕ ಮಿತ್ರ ಹಾಗೂ ಕಾಮಗಾರಿ ನಿರತ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.