×
Ad

Aurad | ವಿಬಿ-ಜಿ ರಾಮ್ ಜಿ ಯೋಜನೆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಶಿವಕುಮಾರ್ ಘಾಟೆ

ಧೂಪತಮಹಾಗಾಂವ್ ಕಾಮಗಾರಿ ಪರಿಶೀಲನೆ

Update: 2026-07-14 18:24 IST

ಔರಾದ್: ಗ್ರಾಮೀಣ ಕುಟುಂಬಗಳಿಗೆ ಹೆಚ್ಚಿನ ಉದ್ಯೋಗಾವಕಾಶ, ಗ್ರಾಮೀಣಾಭಿವೃದ್ಧಿ ಹಾಗೂ ಜೀವನೋಪಾಯ ಕಲ್ಪಿಸುವ ಉದ್ದೇಶದಿಂದ ಜಾರಿಗೊಂಡಿರುವ ವಿಬಿ-ಜಿ ರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಪ್ರತಿಯೊಬ್ಬ ಅರ್ಹ ಕುಟುಂಬವು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ಹೇಳಿದರು.

ತಾಲೂಕಿನ ಧೂಪತಮಹಾಗಾಂವ್ ಗ್ರಾಮದಲ್ಲಿ ನಡೆಯುತ್ತಿರುವ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆಯಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದೆ. ದಿನಗೂಲಿ ಮೊತ್ತವನ್ನು 370 ರೂ. ನಿಂದದ 382 ರೂ. ಗೆ ಹೆಚ್ಚಿಸಲಾಗಿದ್ದು, ವಾರ್ಷಿಕ ಉದ್ಯೋಗ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಉದ್ಯೋಗ ಖಾತರಿ ಕಾರ್ಡ್ ಹೊಂದಿರುವ ಒಂದು ಕುಟುಂಬವು ವರ್ಷಕ್ಕೆ ಗರಿಷ್ಠ 47,750 ರೂ. ವರೆಗೆ ಆದಾಯ ಗಳಿಸುವ ಅವಕಾಶ ಹೊಂದಿದೆ. ಯೋಜನೆಯ ಸೌಲಭ್ಯಗಳನ್ನು ಪ್ರತಿಯೊಬ್ಬ ಅರ್ಹ ಕುಟುಂಬ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕೂಲಿ ಕಾರ್ಮಿಕರು ಕೆಲಸದ ಸ್ಥಳದಲ್ಲಿ ಕಡ್ಡಾಯವಾಗಿ ಎನ್‌ಎಂಎಂಎಸ್ (NMMS) ಮೂಲಕ ಹಾಜರಾತಿ ದಾಖಲಿಸಬೇಕು. ಕೃಷಿ ಚಟುವಟಿಕೆಗಳಿಗೆ 60 ದಿನಗಳ ವಿರಾಮದ ಅವಕಾಶವಿದ್ದು, ಅರ್ಹರಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಿದೆ. ಈ ಯೋಜನೆಯ ಬಗ್ಗೆ ಸಾರ್ವಜನಿಕರು ಸಮಗ್ರ ಮಾಹಿತಿ ಪಡೆದು ಪ್ರಯೋಜನ ಪಡೆಯಬೇಕು ಎಂದು ಶಿವಕುಮಾರ್ ಘಾಟೆ ತಿಳಿಸಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಹಾಯಕ ಶರಣಪ್ಪ ರಕ್ಷೆ, ಡಿಇಒ ಪ್ರಕಾಶ್ ಕಾಶಿನಾಥ್, ಗ್ರಾಮ ಕಾಯಕ ಮಿತ್ರ ಜಗದೇವಿ, ತಾಪಂ ಐಇಸಿ ಸಂಯೋಜಕ ಅಂಬಾದಾಸ್ ಪಾಟೀಲ್ ಹಾಗೂ ಕಾಮಗಾರಿ ನಿರತ ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News