Aurad | ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರೇರಣೆ : ತಹಶೀಲ್ದಾರ್ ಮಹೇಶ್ ಪಾಟೀಲ್

ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Update: 2026-07-19 19:46 IST

ಔರಾದ್ : ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಹೆಚ್ಚಿಸುವುದಲ್ಲದೆ, ಇತರ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಪ್ರೇರಣೆಯಾಗುತ್ತವೆ ಎಂದು ತಹಸೀಲ್ದಾರ್ ಮಹೇಶ್ ಪಾಟೀಲ್ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿದ್ದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರು, ಪತ್ರಕರ್ತರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸರ್ಕಾರಿ ನೌಕರರ ಸಂಘಕ್ಕೆ ಸ್ವಂತ ಭವನದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಂಘ ಕೈಗೊಂಡಿರುವ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ್ ಪಾಟೀಲ್ ಮಾತನಾಡಿ, ಸರ್ಕಾರಿ ನೌಕರರ ಸಂಘವು ನೌಕರರ ಹಿತಾಸಕ್ತಿಗಾಗಿ ಉತ್ತಮ ಕಾರ್ಯಗಳನ್ನು ಕೈಗೊಳ್ಳುತ್ತಿದೆ. ನೌಕರರ ಮಕ್ಕಳನ್ನು ಪ್ರತಿಭಾ ಪುರಸ್ಕಾರದ ಮೂಲಕ ಗೌರವಿಸುವುದು ಅವರಲ್ಲಿ ಆತ್ಮವಿಶ್ವಾಸ ಮತ್ತು ಉತ್ಸಾಹವನ್ನು ಹೆಚ್ಚಿಸುವ ಕೆಲಸವಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್ ಚಿದ್ರಿ ಮಾತನಾಡಿ, ಸರ್ಕಾರಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸಂಘ ಸದಾ ಬದ್ಧವಾಗಿದೆ. ಗಡಿ ಭಾಗದಲ್ಲಿಯೂ ಸಂಘ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿಭಾವಂತ ಮಕ್ಕಳು, ಪತ್ರಕರ್ತರು ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರರೆಡ್ಡಿ ಮಾತನಾಡಿ, ಡಿಜಿಟಲ್ ಯುಗಕ್ಕೆ ಅನುಗುಣವಾಗಿ ಸರ್ಕಾರಿ ನೌಕರರಿಗೆ ವಿವಿಧ ತಂತ್ರಾಂಶಗಳ ಮೂಲಕ ಅನುಕೂಲ ಕಲ್ಪಿಸಲಾಗುತ್ತಿದೆ. ಕೆಜಿಐಡಿ ಡಿಜಿಟಲೀಕರಣ ಸೇರಿದಂತೆ ನೌಕರರ ಕುಟುಂಬದ ಆರೋಗ್ಯ ಸಂಬಂಧಿತ ಸೇವೆಗಳೂ ಸುಲಭವಾಗಿ ದೊರೆಯುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಂಡರಿ ಆಡೆ, ಪಿಎಸ್‌ಐ ರೇಣುಕಾ ಭಾಲೇಕರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳನ್ನು, ವಿವಿಧ ಇಲಾಖೆಗಳ ನಿವೃತ್ತ ನೌಕರರನ್ನು, ಪತ್ರಕರ್ತರನ್ನು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ನಿರ್ದೇಶಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಾರ್ತಂಡ್, ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ್ ಬಿರಾದಾರ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಗಜಾನನ ಮಳ್ಳಾ, ಶಿವಾನಂದ್ ಸ್ವಾಮಿ, ರೋಹಿದಾಸ್ ಮೇತ್ರೆ, ಬಾಲಾಜಿ ಬಿರಾದಾರ್, ಯುಸುಫಮಿಯ್ಯ, ರಾಜಕುಮಾರ್ ಡೊಂಗರೆ, ಮಹಾದೇವ್ ಚಿಟಗೀರೆ ಹಾಗೂ ಸಂಗಮೇಶ್ ರೆಡ್ಡಿ ಸೇರಿದಂತೆ ನೌಕರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News