ಔರಾದ್ | ವಾಟರ್‌ಮ್ಯಾನ್ ಆತ್ಮಹತ್ಯೆ
ಔರಾದ್: ಎದೆನೋವಿನಿಂದ ವಾಟರ್‌ಮ್ಯಾನ್‌ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಎಕಲಾರ್ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಎಕಲಾರ್ ಗ್ರಾಮದ ವಾಟರ್‌ಮ್ಯಾನ್ ಸಂಗಮನಾಥ್ ಪಿಟ್ರೆ (45) ಎಂದು ಗುರುತಿಸಲಾಗಿದೆ. ಶನಿವಾರದಿಂದ ಎದೆನೋವಿನಿಂದ ಬಳಲುತ್ತಿದ್ದ ಅವರು, ನೋವು ಕಡಿಮೆಯಾಗದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸಂಗಮನಾಥ್ ಅವರ ಪತ್ನಿ ಶ್ರಾವಣ ಮಾಸದ ಹಿನ್ನೆಲೆಯಲ್ಲಿ ತೆಲಂಗಾಣದ ಝರಾಸಂಗಂಗೆ ಪಾದಯಾತ್ರೆ ಮೂಲಕ ತೆರಳಿದ್ದರು. ಈ ವೇಳೆ ಮನೆಯಲ್ಲಿದ್ದ ಸಂಗಮನಾಥ್ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದರೂ ನೋವು ಕಡಿಮೆಯಾಗಿರಲಿಲ್ಲ ಎಂದು ತಿಳಿದುಬಂದಿದೆ.
ನೋವು ತಾಳಲಾರದೆ ಜಿಗುಪ್ಸೆಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.