Aurad | ಬೈಕ್ ಸ್ಕಿಡ್ ಆಗಿ ಬಿದ್ದು ಯುವಕ ಮೃತ್ಯು
ಔರಾದ್ : ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಯನಗುಂದಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪ ಶನಿವಾರ ರಾತ್ರಿ ನಡೆದಿದೆ.
ಮೃತರನ್ನು ಬೆಲ್ದಾಳ ಗ್ರಾಮದ ಅಂಬಾದಾಸ್ ಉಪ್ಪಾರ್ (23) ಎಂದು ಗುರುತಿಸಲಾಗಿದೆ.
ಅಂಬಾದಾಸ್ ಅವರು ಎಂದಿನಂತೆ ಔರಾದ್ ಪಟ್ಟಣದಲ್ಲಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಯನಗುಂದಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿ ಬೈಕ್‌ನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾರೆ ಎನ್ನಲಾಗಿದೆ.
ಸ್ವಲ್ಪ ಸಮಯದ ಬಳಿಕ ಅದೇ ಗ್ರಾಮದ ಕೆಲ ಯುವಕರು ಬೈಕ್‌ನಲ್ಲಿ ಬರುತ್ತಿದ್ದಾಗ ಅವರು ಬಿದ್ದಿರುವುದನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅಂಬಾದಾಸ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.