ಔರಾದ್: ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷವನ್ನು ಬಲಪಡಿಸಲು ಸಾಧ್ಯ. ಪಕ್ಷಕ್ಕಾಗಿ ದುಡಿದವರಿಗೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ವೀಕ್ಷಕಿ ಜ್ಯೋತಿ ಮರಗೂಳ್ ಹೇಳಿದರು.
ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಿದ್ದ ‘ಕಾಂಗ್ರೆಸ್ ಪಕ್ಷ ಸಂಘಟನೆ ಸೃಜನ ಅಭಿಯಾನ-2’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ವೀಕ್ಷಕ ಹಸನಸಾಬ್ ಧೋಟಿಹಾಳ್ ಮಾತನಾಡಿ, ಕಳೆದ ಒಂಬತ್ತು ವರ್ಷಗಳಿಂದ ರಾಜಕುಮಾರ್ ಹಲಬುರ್ಗೆ ಅವರು ತಾಲೂಕು ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ ಶ್ರಮಿಸಿದ್ದಾರೆ. ಅಲ್ಲದೆ, ಎಲ್ಲ ಸಮುದಾಯಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಜನಸಾಮಾನ್ಯರಿಗೆ ನೆರವಾಗಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಆಕಾಂಕ್ಷಿಗಳು ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದರು.
ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರಾಜಕುಮಾರ್ ಹಲಬುರ್ಗೆ, ಹಿರಿಯ ಮುಖಂಡ ಡಾ. ಭೀಮಸೇನರಾವ್ ಶಿಂಧೆ, ರಾಜಶ್ರೀ ಸ್ವಾಮಿ, ಸಂಜಯ್ ಜಾಗಿರದಾರ್, ಸುಧಾಕರ್ ಕೊಳ್ಳುರ್, ಅನೀಲ್ ಹೆಡೆ, ಚನ್ನಪ್ಪ ಉಪ್ಪೆ, ಶರಣಪ್ಪ ಪಾಟೀಲ್, ರಾಜಕುಮಾರ್ ಕಂದುಗುಳ್, ಡಾ. ಫಯಾಜ್ ಅಲಿ ಹಾಗೂ ದತ್ತಾತ್ರಿ ಬಾಪುರೆ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.