Basavakalyan | ಅಭಿನವಶ್ರೀ ಜನ್ಮದಿನೋತ್ಸವ: ರಕ್ತದಾನ, ಕ್ಯಾನ್ಸರ್ ಜಾಗೃತಿ ಪಾದಯಾತ್ರೆ, ಪರಿಸರ ಜಾಗೃತಿ ಕಾರ್ಯಕ್ರಮ
ಬಸವಕಲ್ಯಾಣ: ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ ಜನ್ಮದಿನೋತ್ಸವ ಹಾಗೂ ಪಟ್ಟಾಧಿಕಾರ ವರ್ಧಂತಿ ಮಹೋತ್ಸವದ ಅಂಗವಾಗಿ ಸೆ.27 ಮತ್ತು 28ರಂದು ಬಸವಕಲ್ಯಾಣದಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
‘ಜಾಗೃತಿ ನಮ್ಮ ಹೆಜ್ಜೆ–ಆರೋಗ್ಯ ನಮ್ಮ ಗುರಿ’ ಎಂಬ ಆಶಯದೊಂದಿಗೆ ಸೆ.27ರಂದು ಬೆಳಿಗ್ಗೆ 11 ಗಂಟೆಗೆ ಮಹಾತ್ಮ ಗಾಂಧಿ ವೃತ್ತದಿಂದ ಶಿವಾಜಿ ಪಾರ್ಕ್‌ವರೆಗೆ ಕ್ಯಾನ್ಸರ್ ಜಾಗೃತಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ರಾಜಕೀಯ ಮುಖಂಡರು, ಹಿರಿಯ ನಾಗರಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ಪಾಲ್ಗೊಳ್ಳುವವರಿಗೆ ಪ್ರಮಾಣಪತ್ರ ವಿತರಿಸಲಾಗುವುದು.
ಇದೇ ಸಂದರ್ಭದಲ್ಲಿ ‘ಪ್ಲಾಸ್ಟಿಕ್ ಮುಕ್ತ ಸಮಾಜದತ್ತ ಅಭಿನವಶ್ರೀಗಳ ಹಸಿರು ಹೆಜ್ಜೆ’ ಎಂಬ ಲೇಖನ ಸಂಗ್ರಹ ಹಾಗೂ ಪರಿಸರ ಜಾಗೃತಿ ಕುರಿತ ‘ಅಭಿನವಶ್ರೀ ಪ್ಲಾಸ್ಟಿಕ್ ಮುಕ್ತ ಸಮಾಜದ ದೀಪಸ್ತಂಭ’ ಕೃತಿಯನ್ನು ಲೋಕಾರ್ಪಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ, ಆರೋಗ್ಯ ಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆ ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸೆ.28ರಂದು ಬೆಳಿಗ್ಗೆ 11 ಗಂಟೆಗೆ ಗವಿಮಠದ ಆವರಣದಲ್ಲಿ ಯುವ ಕ್ರಾಂತಿ ಸಂಘಟನೆ ಹಾಗೂ ಶ್ರೀ ಘನಲಿಂಗ ರುದ್ರಮುನಿ ಶಿವಾಚಾರ್ಯ ಟ್ರಸ್ಟ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಜೀವ ಉಳಿಸುವ ಮಾನವೀಯ ಕಾರ್ಯದಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.
ಜನ್ಮದಿನೋತ್ಸವ ಹಾಗೂ ಪಟ್ಟಾಧಿಕಾರ ವರ್ಧಂತಿ ಮಹೋತ್ಸವದ ಅಂಗವಾಗಿ ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ ಮತ್ತು ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು, ಶರಣ ಬಂಧುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.