ಬಸವಕಲ್ಯಾಣ: ಬೆಲೆ ಏರಿಕೆಯನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಶಾಸಕ ಶರಣು ಸಲಗರ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕ ಶರಣು ಸಲಗರ, ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ದುರ್ನೀತಿಯನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವ ಮೂಲಕ ಅಬಕಾರಿ ಇಲಾಖೆಯಿಂದ ಆದಾಯ ಗಳಿಸುತ್ತಿದೆ. ಇದರಿಂದ ಸಣ್ಣ ಮಕ್ಕಳು ಕೂಡ ದುಶ್ಚಟಗಳಿಗೆ ಬಲಿಯಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ಆರೋಪಿಸಿದರು.

ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಬಡವರ ಶಾಪ ತಟ್ಟಲಿದೆ. ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಭೀಕರ ಬರಗಾಲದಿಂದ ರೈತರು ಬೆಳೆದ ಬೆಳೆಗಳು ಒಣಗಿಹೋಗಿದ್ದು, ಅನ್ನದಾತರು ಕಂಗಾಲಾಗಿ ಕಣ್ಣೀರು ಹಾಕುತ್ತಿದ್ದಾರೆ. ಆದರೆ, ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ವಿರುದ್ಧ ಎಷ್ಟು ಅಪಪ್ರಚಾರ ಮಾಡುತ್ತೀರೋ ಮಾಡಿ, ಮುಂದಿನ ಚುನಾವಣೆಯಲ್ಲಿ ಒಂದು ಲಕ್ಷದ 15 ಸಾವಿರ ಮತಗಳನ್ನು ಪಡೆದು ಗೆಲ್ಲಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ತಾಕತ್ತಿದ್ದರೆ ಮುಂದಿನ ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ವಿರೋಧ ಪಕ್ಷದವರಿಗೆ ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಸೂರ್ಯಕಾಂತ್ ಚಿಲ್ಲಾಬಟ್ಟೆ, ಸಿದ್ದು ಬಿರಾದಾರ್, ಜ್ಞಾನೇಶ್ವರ್ ಮೂಳೆ, ಶಂಕರ್ ನಾಗದೆ, ದೀಪಕ್ ಗಾಯಕ್ವಾಡ್ ಹಾಗೂ ಕೃಷ್ಣ ಗೋಣೆ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ