ಬಸವಕಲ್ಯಾಣ | ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀರ್ ಅಝರ್ ಅಲಿ ನವರಂಗ ನಿಧನ
ಬಸವಕಲ್ಯಾಣ: ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀರ್ ಅಝರ್ ಅಲಿ ನವರಂಗ (73) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಬೆಳಗಿನ ಜಾವ 4 ಗಂಟೆಗೆ ತಮ್ಮ ನಿವಾಸದಲ್ಲಿ ನಿಧನರಾದರು.
ಮೀರ್ ಅಝರ್ ಅಲಿ ಅವರು ಎರಡು ಬಾರಿ ಪುರಸಭೆ ಹಾಗೂ ಒಂದು ಬಾರಿ ನಗರಸಭೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಪ್ರಿಯತೆ ಗಳಿಸಿದ್ದರು. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಅವರು, ಪ್ರಸ್ತುತ ಬಸವಕಲ್ಯಾಣ ನಗರ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ್ ಪಾಟೀಲ್ ಮತ್ತು ಚಂದ್ರಶೇಖರ್ ಪಾಟೀಲ್, ಮಾಜಿ ಶಾಸಕ ಮಲ್ಲಿಕಾರ್ಜುನ್ ಖೂಬಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಮಾಜಿ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಸೇರಿದಂತೆ ಹಲವು ರಾಜಕೀಯ ನಾಯಕರು ಹಾಗೂ ಸಾವಿರಾರು ಸಾರ್ವಜನಿಕರು ಅಂತಿಮ ದರ್ಶನ ಪಡೆದರು.
ರವಿವಾರ ಸಂಜೆ 7 ಗಂಟೆ ಸುಮಾರಿಗೆ ನಗರದ ಸಾರ್ವಜನಿಕರ ಸಮ್ಮುಖದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿತು.