ಬಸವಕಲ್ಯಾಣ: ಕಳೆದ ಒಂದು ವರ್ಷದಿಂದ ಶಾಸಕ ಶರಣು ಸಲಗರ್ ಅವರು ತಾಲೂಕು ಕೆಡಿಪಿ ಸಭೆ ನಡೆಸದ ಹಿನ್ನೆಲೆಯಲ್ಲಿ ಕೆಡಿಪಿ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಕಾಂಗ್ರೆಸ್ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಶಾಸಕ ಶರಣು ಸಲಗರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತಾಲೂಕಿನ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದರು.

ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಅವುಗಳಿಗೆ ಕೂಡಲೇ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ತಾಲೂಕಿನ ಪ್ರತಿಯೊಂದು ಹಳ್ಳಿಯಲ್ಲೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ಬಂದ್ ಮಾಡಬೇಕು ಎಂದು ಆಗ್ರಹಿಸಿದರು.

ಇದಲ್ಲದೆ, ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ, ನೀರಿನ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಸ್ಥಳಕ್ಕೆ ಆಗಮಿಸದ ಕೆಲವು ಅಧಿಕಾರಿಗಳ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆನಂದ್ ಪಾಟೀಲ್ ಕೊಹಿನೂರ್, ಶಿವಕುಮಾರ್ ಶೆಟಗಾರ್, ನವಾಜ್ ತಾಜ್ಮಿ, ಸಂದೀಪ್ ಭೂಯೆ, ಪಿಂಟು ಕಾಂಬ್ಳೆ, ಅನ್ನಪೂರ್ಣಬಾಯಿ, ಸಿದ್ರಾಮ್ ಕಾಮಣ್ಣ, ನಿತ್ಯಾನಂದ್ ಮಂಠಾಳ್ಕರ್ ಹಾಗೂ ಮಹಾದೇವ್ ಗಾಯಕ್ವಾಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ