ಬಸವಕಲ್ಯಾಣ | ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಯಲು ಮುಂಜಾಗ್ರತೆ ವಹಿಸಿ: ಪ್ರಕಾಶ್ ಕುದರೆ
ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಗತಿ ಪರಿಶೀಲನಾ ಸಭೆ
ಬಸವಕಲ್ಯಾಣ: ಬೇಸಿಗೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಚಿತವಾಗಿ ಯೋಜನೆ ರೂಪಿಸಿ ಕ್ರಮ ಕೈಗೊಳ್ಳಬೇಕು ಎಂದು ಬಸವಕಲ್ಯಾಣದ ಸಹಾಯಕ ಆಯುಕ್ತ ಪ್ರಕಾಶ್ ಕುದರೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಅಧಿಕಾರಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಹೀಗಾಗಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಈ ವರ್ಷ ಮಳೆ ಪ್ರಮಾಣ ಹೆಚ್ಚಿದ್ದರೂ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಆದ್ದರಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ಗ್ರಾಮಸಭೆ ಮತ್ತು ವಾರ್ಡ್ ಸಭೆಗಳನ್ನು ನಡೆಸಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಸಮಸ್ಯೆಗಳನ್ನು ಗುರುತಿಸಬೇಕು ಎಂದು ಹೇಳಿದರು.
ಬೇಸಿಗೆ ಮುಗಿಯುವವರೆಗೂ ಗ್ರಾಮಸ್ಥರಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್ ದತ್ತಾತ್ರೆಯ ಗಾದಾ ಮಾತನಾಡಿ, ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಮಾತ್ರ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಅವುಗಳ ಮಾಹಿತಿ ಸಂಗ್ರಹಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸುಲ್ಪಿ ಮಾತನಾಡಿ, ಈಗಾಗಲೇ ಯಾವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂಬ ಪಟ್ಟಿ ಸಿದ್ಧಪಡಿಸಲಾಗಿದೆ. ಸಮಸ್ಯೆ ಪರಿಹರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಎಇಇ ಶಿವರಾಜ್ ಪಲ್ಲೇರಿ ಮಾತನಾಡಿ, ಸರ್ಕಾರಿ ಬಾವಿ ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಕೊರತೆ ಇದ್ದರೆ ಖಾಸಗಿ ಬಾವಿ ಮತ್ತು ಕೊಳವೆ ಬಾವಿಗಳನ್ನು ಗುರುತಿಸಿ ಸರ್ಕಾರದ ನಿಯಮಾವಳಿ ಪ್ರಕಾರ ನೀರನ್ನು ಖರೀದಿಸಿ ಗ್ರಾಮಸ್ಥರಿಗೆ ಪೂರೈಕೆ ಮಾಡುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹುಲಸೂರ್ ತಹಶೀಲ್ದಾರ್ ಶಿವಾನಂದ್ ಮೇತ್ರೆ, ಹುಲಸೂರ್ ತಾಲುಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಮಹಾದೇವ ಜಮ್ಮು, ಸಿಎಂಸಿ ಆಯುಕ್ತ ರಾಜು ಬಣಗಾರ್ ಹಾಗೂ ಗ್ರೇಡ್-2 ತಹಶೀಲ್ದಾರ್ ರಮೇಶ್ ಹಾಲು ಸೇರಿದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಇದ್ದರು.