ಭಾಲ್ಕಿ: ದಾನಗಳಲ್ಲಿ ರಕ್ತದಾನ ಅತ್ಯಂತ ಶ್ರೇಷ್ಠವಾದದ್ದು. ಒಬ್ಬ ವ್ಯಕ್ತಿ ನೀಡುವ ಒಂದು ಯೂನಿಟ್ ರಕ್ತದಿಂದ ಸಂಕಷ್ಟದಲ್ಲಿರುವ ರೋಗಿಗಳ ಜೀವ ಉಳಿಸಲು ಸಾಧ್ಯವಿದೆ ಎಂದು ಮಕ್ಕಳ ತಜ್ಞ ಡಾ.ರಾಜೇಂದ್ರ ಜಾಧವ ಹೇಳಿದರು.

ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯವಂತ ಪ್ರತಿಯೊಬ್ಬ ಯುವಕರೂ ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗುವ ಮೂಲಕ ಸಮಾಜದಲ್ಲಿ ಮಾನವೀಯತೆ ಮೆರೆಯಬೇಕು ಎಂದು ಅವರು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜಶೇಖರ ಹರಸೂರ್ ಮಾತನಾಡಿ, ಇಂದಿನ ಒತ್ತಡದ ಜೀವನಶೈಲಿಯಲ್ಲಿ ಆರೋಗ್ಯವೇ ಮುಖ್ಯ ಎಂಬುದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ವಕೀಲರು ಮತ್ತು ಸಾರ್ವಜನಿಕರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ತಡೆಗಟ್ಟಬಹುದು. ವಕೀಲರ ಸಂಘವು ಇಂತಹ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ್ ರಾಚೋಟೆ ಮಾತನಾಡಿ, ವಕೀಲರು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ಯಶಸ್ಸಿಗೆ ಸಹಕರಿಸಿದ ವೈದ್ಯರ ತಂಡ ಹಾಗೂ ಗಣ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಧೀಶೆ ಸವಿತಾ, ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರೆ, ತಾಲೂಕು ಆರೋಗ್ಯಾಧಿಕಾರಿ ಡಾ. ವಿಲಾಸ್ ಕನಸೆ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜೈರಾಜ್ ಪಾತ್ರೆ, ವಕೀಲರ ಸಂಘದ ಉಪಾಧ್ಯಕ್ಷ ಮಕರಂದ್ ಮಾನಕಾರಿ, ಕಾರ್ಯದರ್ಶಿ ವಾಗೇಶ್ ಪಾಟೀಲ್, ಜಂಟಿ ಕಾರ್ಯದರ್ಶಿ ನೀಲಕಂಠ್ ಬಿರಾದಾರ್, ಖಜಾಂಚಿ ರಮಣ್ ಗಾಯಕವಾಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ