ಭಾಲ್ಕಿ: 2026-27ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಲ್ಕಿಯ ಶಿವಾಜಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ರೀಡಾಪಟುಗಳು ಖೋ ಖೋ ಸೇರಿದಂತೆ ವಿವಿಧ ಕ್ರೀಡಾ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಬೀದರ್‌ನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಿವಾಜಿ ಪದವಿ ಪೂರ್ವ ಕಾಲೇಜಿನ ಬಾಲಕರ ಖೋ ಖೋ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಯೋಗಾಸನ, ಕುಸ್ತಿ ಹಾಗೂ 800 ಮೀಟರ್ ಓಟದಲ್ಲಿ ಬಾಲಕಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 100 ಮೀಟರ್ ಓಟದಲ್ಲಿ ಬಾಲಕ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಸಂಸ್ಥೆಯ ಅಧ್ಯಕ್ಷ ಅನೀಲ್ ಶಿಂದೆ ಮಾತನಾಡಿ, ಶಿಕ್ಷಣ ಪ್ರಸಾರಕ ಮಂಡಳಿಯ ಸಂಸ್ಥಾಪಕ ಅಧ್ಯಕ್ಷ ದಿ. ಬಾಬಾರಾವ್ ಹೊನ್ನಾಳಿಕರ್ ಅವರ ದೂರದೃಷ್ಟಿ ಹಾಗೂ ಪರಿಶ್ರಮದ ಫಲವಾಗಿ ಸಂಸ್ಥೆ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಯಶಸ್ಸು ಸಾಧಿಸಿ ತಾಲೂಕು ಮತ್ತು ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು.

ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಿವಾಜಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ರಾಜಕುಮಾರ್ ಪಾಟೀಲ್ ಗೌರವಿಸಿ ಅಭಿನಂದಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಡಾ. ಪ್ರಕಾಶ್ ಪಾಟೀಲ್, ರಾಮರಾವ್ ವರವಟ್ಟಿಕರ್, ಡಿಗಂಬರಾವ್ ಮಾನಕರಿ, ಅಶೋಕರಾವ್ ಸೂರ್ಯವಂಶಿ, ಪ್ರಾಚಾರ್ಯ ರಾಜಕುಮಾರ್ ಪಾಟೀಲ್, ದೈಹಿಕ ನಿರ್ದೇಶಕಿ ಪೂಜಾ ಇಂಗಳೆ ಸೇರಿದಂತೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor