ಭಾಲ್ಕಿ: ತಂತ್ರಜ್ಞಾನ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಆವಿಷ್ಕಾರಗಳು ಮತ್ತು ಬದಲಾವಣೆಗಳು ಸಂಭವಿಸುತ್ತಿವೆ. ಇಂತಹ ಸ್ಪರ್ಧಾತ್ಮಕ ಯುಗದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ತಾಂತ್ರಿಕ ವಿಷಯಗಳ ಆಳವಾದ ಜ್ಞಾನ, ಪ್ರಾಯೋಗಿಕ ಅನುಭವ ಹಾಗೂ ಸಮಸ್ಯೆಗಳನ್ನು ಪರಿಹರಿಸುವ ಕೌಶಲ ಬೆಳೆಸಿಕೊಳ್ಳಬೇಕು ಎಂದು ಅಮೆರಿಕದ ತಂತ್ರಜ್ಞಾನ ಕ್ಷೇತ್ರದಲ್ಲಿ ಅನುಭವ ಹೊಂದಿರುವ ನೀಲಕಂಠ ನಿಡಗುಂದಿ ಹೇಳಿದರು.

ನಗರದ ಎಸ್.ವಿ.ಇ. ಸೊಸೈಟಿಯ ಭೀಮಣ್ಣ ಖಂಡ್ರೆ ತಾಂತ್ರಿಕ ಮಹಾವಿದ್ಯಾಲಯದ (ಬಿಕೆಐಟಿ) ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಶುಕ್ರವಾರ ‘ಮೊಬೈಲ್ ತಂತ್ರಜ್ಞಾನ ಮತ್ತು ಮಾರುಕಟ್ಟೆ ಪ್ರವೃತ್ತಿಗಳಲ್ಲಿನ ಇತ್ತೀಚಿನ ಪ್ರಗತಿಗಳು’ ಎಂಬ ವಿಷಯದ ಕುರಿತು ಆಯೋಜಿಸಿದ್ದ ವಿಶೇಷ ತಾಂತ್ರಿಕ ಉಪನ್ಯಾಸದಲ್ಲಿ ಅವರು ಮಾತನಾಡಿದರು.

ಪರೀಕ್ಷೆಯಲ್ಲಿ ಅಂಕ ಗಳಿಸುವುದಕ್ಕಿಂತ ವಿಷಯದ ಮೂಲಭೂತ ಪರಿಕಲ್ಪನೆಗಳನ್ನು ಅರ್ಥಮಾಡಿಕೊಂಡು, ಅವುಗಳನ್ನು ನೈಜ ಜೀವನದಲ್ಲಿ ಅನ್ವಯಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಮೊಬೈಲ್ ತಂತ್ರಜ್ಞಾನವು ಇಂದು ವ್ಯಕ್ತಿಯ ದೈನಂದಿನ ಬದುಕಿನಿಂದ ಹಿಡಿದು ಕುಟುಂಬ, ಶಿಕ್ಷಣ, ಉದ್ಯಮ ಮತ್ತು ಸಮಾಜದ ಪ್ರತಿಯೊಂದು ಕ್ಷೇತ್ರದ ಮೇಲೂ ಪ್ರಭಾವ ಬೀರುತ್ತಿದೆ. ಇಂತಹ ಬದಲಾವಣೆಗಳ ಬಗ್ಗೆ ವಿದ್ಯಾರ್ಥಿಗಳು ಕೇವಲ ಮಾಹಿತಿ ಹೊಂದುವುದಷ್ಟೇ ಸಾಲದು. ಅವುಗಳ ಹಿಂದಿನ ತಾಂತ್ರಿಕ ಪರಿಕಲ್ಪನೆಗಳನ್ನು ಅರ್ಥಮಾಡಿಕೊಂಡು ಹೊಸ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಪದವಿ ಶಿಕ್ಷಣದ ಅವಧಿಯಲ್ಲಿಯೇ ಭವಿಷ್ಯದ ವೃತ್ತಿಜೀವನದ ಗುರಿಯನ್ನು ನಿರ್ಧರಿಸಿಕೊಳ್ಳಬೇಕು. ಸಾಫ್ಟ್‌ವೇರ್ ಅಭಿವೃದ್ಧಿ, ಉತ್ಪಾದನಾ ವಲಯ, ಮೂಲಸೌಕರ್ಯ ಮತ್ತು ಉತ್ಪನ್ನ ಆಧಾರಿತ ಕಂಪನಿಗಳಲ್ಲಿ ಲಭ್ಯವಿರುವ ಅವಕಾಶಗಳನ್ನು ಗುರುತಿಸಿ, ಉದ್ಯಮದ ಅಗತ್ಯಕ್ಕೆ ತಕ್ಕಂತೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ್ ದೇವಣಿ, ಡಾ. ಬಿ. ಸೂರ್ಯಕಾಂತ್, ಡಾ. ಶರಣಬಸಪ್ಪ ಬೆಳಮಗಿ, ಪ್ರೊ. ಯುವನ್, ವಿಭಾಗದ ಬೋಧಕ ಸಿಬ್ಬಂದಿ ಹಾಗೂ ಏಳನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಸಂಗುಲ್ಗಿ ಸ್ವಾಗತಿಸಿದರು. ಡಾ. ಸತೀಶ್ ಕನ್ನಳೆ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor