ಭಾಲ್ಕಿ: ಗಡಿಭಾಗದ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಕನ್ನಡ ನಾಮಫಲಕ ನಿಯಮಗಳನ್ನು ಉಲ್ಲಂಘಿಸಿ ಅನ್ಯಭಾಷೆಯ ನಾಮಫಲಕಗಳನ್ನು ಅಳವಡಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಸರ್ಕಾರಿ ಶಾಲೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದರು.

ನಂತರ ಮಾತನಾಡಿದ ಸಂಘಟನೆಯ ಪ್ರಮುಖರು, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ವಿವಿಧ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಮತ್ತು ಶೇ.40ರಷ್ಟು ಆಂಗ್ಲ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ. ಆದರೆ, ತಾಲ್ಲೂಕಿನ ಅನೇಕ ಸರ್ಕಾರಿ ಶಾಲೆಗಳಲ್ಲಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಅನ್ಯಭಾಷೆಯ ನಾಮಫಲಕಗಳನ್ನು ಅಳವಡಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಆದೇಶವನ್ನು ಜಾರಿಗೊಳಿಸಬೇಕಾದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯೋಪಾಧ್ಯಾಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದೂರಿದರು. ಗಡಿಭಾಗದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಿಗರ ಅಸ್ತಿತ್ವವನ್ನು ಉಳಿಸುವುದು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯ ಕರ್ತವ್ಯವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿಯೇ ಕನ್ನಡ ನಾಮಫಲಕಗಳಿಗೆ ಆದ್ಯತೆ ನೀಡದಿರುವುದು ಗಂಭೀರ ವಿಚಾರವಾಗಿದೆ. ಇದರಿಂದ ಗಡಿಭಾಗದಲ್ಲಿ ಕನ್ನಡ ಭಾಷೆಯ ಬೆಳವಣಿಗೆಗೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಒಂದು ವಾರದೊಳಗೆ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ಸರ್ಕಾರದ ಆದೇಶವನ್ನು ಜಾರಿಗೊಳಿಸಿ, ಅನ್ಯಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ನಮ್ಮ ಕರ್ನಾಟಕ ಸೇನೆಯ ವತಿಯಿಂದ ಪ್ರಜಾಸತ್ತಾತ್ಮಕ ಹಾಗೂ ಕಾನೂನುಬದ್ಧ ಹೋರಾಟ ನಡೆಸಲಾಗುವುದು ಎಂದು ಮನವಿ ಪತ್ರದಲ್ಲಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಗಣೇಶ್ ಪಾಟೀಲ್, ಪ್ರಮುಖರಾದ ಸುದೀಪ್ ತೂಗಾವೆ, ಬಸವರಾಜ್ ಕಾರಬಾರಿ, ಭದ್ರಯ್ಯ ಸ್ವಾಮಿ, ಕಾಶಿನಾಥ್ ಚಳಕಾಪೂರೆ, ವಿಷ್ಣು ಧ್ರುವೆ, ಜಗದೀಶ್ ಪಾಟೀಲ್, ಮಹೇಶ್ ರಾಚೋಟೆ ಹಾಗೂ ಸಂಗಮೇಶ್ ಮಾರ್ಗೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಬೀದರ್ ಜಿಲ್ಲಾ ವರದಿಗಾರರು

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ