ಬೀದರ್: ಜಿಲ್ಲೆಯ ಜನವಾಡ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಕಲ್ಪಿಸಿರುವ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ಬದಲಾಯಿಸದೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಿದರೆ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿಶ್ವನಾಯಕ ಡಾ. ಬಿ.ಆರ್. ಅಂಬೇಡ್ಕರ್ ಸೇನೆಯ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ್ ಹೊಸಮನಿ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 30ರಿಂದ 35 ವರ್ಷಗಳಿಂದ ಸಾಮಾನ್ಯ ಕ್ಷೇತ್ರವಾಗಿದ್ದ ಜನವಾಡ ಕ್ಷೇತ್ರವು ಪ್ರಸ್ತುತ ಪರಿಶಿಷ್ಟ ಜಾತಿ ಮಹಿಳೆಯರಿಗೆ ಮೀಸಲಾಗಿದೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಮೀಸಲಾತಿಯನ್ನು ರದ್ದುಗೊಳಿಸಿ ಮತ್ತೆ ಸಾಮಾನ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಜನವಾಡ ಜಿಲ್ಲಾ ಪಂಚಾಯಿತಿ ಕ್ಷೇತ್ರ ಸಾಮಾನ್ಯವಾಗಿದ್ದ ಸಂದರ್ಭದಲ್ಲಿ ದಲಿತ ಸಮುದಾಯದವರು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಇದೀಗ ಪರಿಶಿಷ್ಟ ಜಾತಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯುವ ಅವಕಾಶ ಸಿಕ್ಕಿರುವಾಗ ಅದನ್ನು ಕಸಿದುಕೊಳ್ಳಲು ಮುಂದಾಗಿರುವುದು ಖಂಡನೀಯ. ಇದು ದಲಿತ ಸಮುದಾಯಕ್ಕೆ, ವಿಶೇಷವಾಗಿ ದಲಿತ ಮಹಿಳೆಯರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ದಲಿತರ ಮತಗಳನ್ನು ಪಡೆಯುವ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದ ನಂತರ ಅವರ ಹಕ್ಕುಗಳನ್ನು ಕಡೆಗಣಿಸುತ್ತಿವೆ. ಸರ್ಕಾರ ರಚನೆಯಲ್ಲಿ ದಲಿತ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದರೂ, ರಾಜಕೀಯ ಪ್ರಾತಿನಿಧ್ಯದ ವಿಚಾರದಲ್ಲಿ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಮಾಜಿಕ ಹೋರಾಟಗಾರ ಸಂಗಮೇಶ್ ಭಾವಿದೊಡ್ಡಿ ಮಾತನಾಡಿ, ಜನವಾಡ ಕ್ಷೇತ್ರದ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಕೋರಿ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಂಬಂಧಪಟ್ಟ ಶಾಸಕರು, ಸಚಿವರು ಮತ್ತು ಚುನಾವಣಾ ಅಧಿಕಾರಿಗಳು ಎಲ್ಲ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಡಾ. ಅಂಬೇಡ್ಕರ್ ಪ್ರಜಾ ಸೇನೆಯ ರಾಜ್ಯ ಕಾರ್ಯದರ್ಶಿ ರಮೇಶ್ ಪಾಸ್ವಾನ್ ಮಾತನಾಡಿ, ಜನವಾಡ ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಮುಂದಾದರೆ ಸುಮ್ಮನೆ ಕೂರುವುದಿಲ್ಲ. ದಲಿತ ಸಂಘಟನೆಗಳು ಹಾಗೂ ಸಮುದಾಯದ ಮುಖಂಡರನ್ನು ಒಗ್ಗೂಡಿಸಿ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಅಗತ್ಯವಿದ್ದರೆ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೂ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಸಂದೀಪ್ ಕಾಂಟೆ, ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ಬಹುಜನ ಯುತ್ ಪ್ಯಾಂಥರ್ ಜಿಲ್ಲಾಧ್ಯಕ್ಷ ಪುಟ್ಟರಾಜ್ ದೀನೆ, ದಲಿತ ಯುವ ಮುಖಂಡ ಸಂತೋಷ್ ಸಂಗಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor