Bidar | ದುಡಿಯುವ ಕೈಗಳಿಗೆ ಉದ್ಯೋಗ ಕೊಡಲು ಕ್ರಮ : ಸಚಿವ ಈಶ್ವರ್ ಖಂಡ್ರೆ

Update: 2026-08-15 18:41 IST

ಬೀದರ್: ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಬೆಳೆಗಳು ರೈತರ ಕೈಹಿಡಿಯದೆ ನೆಲಕಚ್ಚಿದ್ದು, ಬರ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಯಾರೂ ಗುಳೆ ಹೋಗದಂತೆ ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಗರದ ನೆಹರು ಕ್ರೀಡಾಂಗಣದ ಸಭಾಂಗಣದಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಗೆ ಕೇಂದ್ರ ಸರ್ಕಾರ ವಿಬಿ-ಜಿ ರಾಮ್ ಜಿ ಎಂದು ಮರುನಾಮಕರಣ ಮಾಡಿದೆ. ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯದ ಅನುದಾನದ ಪಾಲಿನಲ್ಲೂ ಬದಲಾವಣೆಯಾಗಿದ್ದು, ಕೇಂದ್ರ ಶೇ.60 ಹಾಗೂ ರಾಜ್ಯ ಶೇ.40ರಷ್ಟು ಪಾಲು ನೀಡಬೇಕಾಗಿದೆ. ಇದರಿಂದ ರಾಜ್ಯದ ಮೇಲೆ ಹೆಚ್ಚಿನ ಆರ್ಥಿಕ ಹೊರೆಯಾಗಿದ್ದರೂ, ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಯೋಜನೆಯಡಿ 48 ಕೋಟಿ ರೂ. ಬಿಡುಗಡೆಯಾಗಿದ್ದು, 3 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಮ್ಮ ಹೊಲ, ನಮ್ಮ ದಾರಿ ಯೋಜನೆ :

‘ನಮ್ಮ ಹೊಲ, ನಮ್ಮ ದಾರಿ’ ಯೋಜನೆಯಡಿ ರೈತರು ತಮ್ಮ ಜಮೀನುಗಳಿಗೆ ತೆರಳಲು ಅಗತ್ಯವಿರುವ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ತಿಂಗಳೊಳಗೆ ಜಿಲ್ಲೆಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.

ನೂತನ ಜಿಲ್ಲಾ ಕ್ರೀಡಾಂಗಣ ಹಾಗೂ ಜಿಲ್ಲಾ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು. ಅರಿವು ಕೇಂದ್ರಗಳ ಗ್ರಂಥಪಾಲಕರ ವೇತನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಕೇಂದ್ರಸ್ಥಳ ಹೊರತುಪಡಿಸಿ ದೊಡ್ಡ ಗ್ರಾಮಗಳಲ್ಲಿಯೂ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

110 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಪಥ :

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ 130 ಕಿ.ಮೀ. ಉದ್ದದ ಕಲ್ಯಾಣ ಪಥ ರಸ್ತೆ ನಿರ್ಮಿಸಲು ಯೋಜಿಸಲಾಗಿದೆ. ಖಾಸಗಿ ಕಂಪನಿಗಳ ಸಹಕಾರದೊಂದಿಗೆ ಸಿಎಸ್‌ಆರ್ ಅನುದಾನದಡಿ ಯುವಕರಿಗೆ ಕೌಶಲ್ಯ ತರಬೇತಿ ನೀಡಲಾಗುವುದು ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಟೆಂಡರ್ ಕರೆಯಲಾಗಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಜನರು ಆಸ್ತಿಯ ಎ ಮತ್ತು ಬಿ ಖಾತಾ ಪಡೆಯಲು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಯುವಕರಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡಾ ಮನೋಭಾವ ಬೆಳೆಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಖರ್ಗೆ ಅವರಿಗೆ ಅವಮಾನ: ಕಠಿಣ ಕ್ರಮಕ್ಕೆ ಆಗ್ರಹ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಈಶ್ವರ್ ಖಂಡ್ರೆ, ಖರ್ಗೆ ಅವರು ಸಭೆ ನಡೆಸಿ ತೆರಳಿದ ಬಳಿಕ ಅವರು ಕಾರ್ಯಕ್ರಮ ನಡೆಸಿದ ಸ್ಥಳವನ್ನು ಜಾತಿವಾದಿ ಹಾಗೂ ಮನುವಾದಿ ಮನಸ್ಥಿತಿಯವರು ಶುದ್ಧೀಕರಣಗೊಳಿಸಿದ್ದಾರೆ ಎಂದು ಆರೋಪಿಸಿದರು.

ಇಂತಹ ಕೃತ್ಯ ಎಸಗಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬೀದರ್ ಉತ್ತರ ಶಾಸಕ ರಹೀಮ್ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಸುಮೀತ ಕುಮಾರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News