ಬೀದರ್ | ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳ ಹಕ್ಕು ಉಲ್ಲಂಘನೆಯಾದಲ್ಲಿ ತಕ್ಷಣವೇ ಸ್ಪಂದಿಸಿ : ಶಶಿಧರ್ ಕೋಸಂಬೆ
ಬೀದರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳ ಹಕ್ಕು ಉಲ್ಲಂಘನೆಯಾದಲ್ಲಿ ತಕ್ಷಣವೇ ಸ್ಪಂದಿಸಿ ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ಕರೆ ನೀಡಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಂಗಳೂರಿನ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡಳಿ, ಮಕ್ಕಳ ಅಭಿವೃದ್ಧಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ರಕ್ಷಣಾ ಘಟಕ ಅವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕು ರಕ್ಷಣೆ ಹಿನ್ನೆಲೆಯಲ್ಲಿ ಆಯೋಜಿಸಿದ ʼಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರʼ ಕಾರ್ಯಾಲಯದಲ್ಲಿ ಅವರು ಮಾತನಾಡಿರು.
ಮಕ್ಕಳ ಹಕ್ಕು ರಕ್ಷಣೆ ಹಾಗೂ ಉಲ್ಲಂಘನೆ ಪ್ರಕರಣಗಳ ಹಿನ್ನೆಲೆ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಜಾಗೃತಿ ಹಾಗೂ ಸಂವಾದ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಎಲ್ಲ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಬೇಕು ಎಂದು ಅವರು ತಿಳಿಸಿದರು.
ಆಯೊಗವು ಮಕ್ಕಳ ರಕ್ಷಣೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ ಅವರು, ಪ್ರತಿ ವಸತಿ ಶಾಲೆಯಲ್ಲಿ ಮಕ್ಕಳ ಸಲಹಾ ಪೆಟ್ಟಿಗೆ ತೆರೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಬನಸೋಡೆ ಮಾತನಾಡಿ, ಮಕ್ಕಳ ಪರವಾಗಿ ಅನೇಕ ಕಾನೂನು, ರಕ್ಷಣಾ ಘಟಕಗಳಿದ್ದರೂ ಸಹ ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಬೀದರ್ ಜಿಲ್ಲೆಯಲ್ಲಿ ಅನೇಕ ಬಾಲ್ಯವಿವಾಹ ತಡೆಯಲಾಗಿದೆ. ಅನೇಕ ಕಡೆ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ. ಮಕ್ಕಳಿಗೆ ಶಿಕ್ಷಣದ ಹಕ್ಕು ದೊರೆಯಬೇಕು. ಬಡತನ, ನಿರುದ್ಯೋಗದಿಂದ ಅನೇಕ ಸಮಸ್ಯೆಗಳು ಉದ್ಭವವಾಗುತ್ತಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಹ ದಾಖಲಾಗಿವೆ. ಮಕ್ಕಳ ಹಕ್ಕು ರಕ್ಷಣೆ ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ ಎಂದರು.
ಮಕ್ಕಳೊಂದಿಗೆ ನಡೆದ ಸಂವಾದಲ್ಲಿ ವಿದ್ಯಾರ್ಥಿಗಳು ಹೇಳಿದ ಸಮಸ್ಯೆಗಳಿಗೆ ಸ್ಥಳದಲ್ಲೇ ಬಗೆಹರಿಸಲಾಯಿತು. ಗಾದಗಿ ಶಾಲೆಯ ಸೋಹೆಲ್ ಎಂಬ ವಿದ್ಯಾರ್ಥಿ 1098 ಸಹಾಯವಾಣಿಗೆ ಕರೆ ಮಾಡಿದರೂ ತಕ್ಷಣ ಪ್ರತಿಕ್ರಿಯೆ ನೀಡಲಿಲ್ಲ ಎಂದು ತಿಳಿಸಿದನು. ಕಾಡಗಾಂವ ಶಾಲೆಯ ವಿದ್ಯಾರ್ಥಿ ತಮ್ಮ ಶಾಲೆಯ ಹತ್ತಿರ ಬಸ್ ನಿಲ್ಲಿಸದ ಕಾರಣಕ್ಕೆ 1098ಕ್ಕೆ ಕರೆ ಮಾಡಿದಾಗ, ನೀವು ಬಸ್ ಡಿಪೋಗೆ ಹೋಗಿ ತಿಳಿಸಿರಿ ಎಂದು ಹೇಳುತ್ತಾರೆ ಎಂದು ತಿಳಿಸಿದಾಗ, ಇದಕ್ಕೆ ಪ್ರತಿಕ್ರಿಯಿಸಿದ ಶಶಿಧರ್ ಕೋಸಂಬೆ, ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಶಾಲೆ ಹತ್ತಿರ ಬಸ್ ನಿಲ್ಲಿಸುವಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷ ರಜಿಯಾ ಬಳಬಟ್ಟಿ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಲೀಂ ಪಾಶಾ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೊಗದ ಮಾಜಿ ಸದಸ್ಯ ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಗೌರಿಶಂಕರ್ ಹಾಗೂ ಇಲಾಖೆಯ ಸಿಬ್ಬಂದಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.