ಬೀದರ್ | ಆಣದೂರ ಗ್ರಾಮ ಪಂಚಾಯತ್‌ನಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ಆರೋಪ : ಸದಸ್ಯರಿಂದ ದೂರು
ಬೀದರ್ : ತಾಲ್ಲೂಕಿನ ಆಣದೂರ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಮತ್ತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಸೇರಿ ಜೆಜೆಎಂ (ಜಲ್ ಜೀವನ್ ಮಿಷನ್) ಯೋಜನೆ ಮತ್ತು 2024–25ನೇ ಸಾಲಿನ 15ನೇ ಹಣಕಾಸು ಯೋಜನೆಗೆ ಮೀಸಲಾದ ಸುಮಾರು 14 ಲಕ್ಷ ರೂ. ಹಣವನ್ನು ಯಾವುದೇ ಕಾಮಗಾರಿ ಕೈಗೊಳ್ಳದೆ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಯೋಜನೆಯಲ್ಲಿ ಬಂದ ಹಣದ ಬಳಕೆಯ ಕುರಿತು ಗ್ರಾಮ ಪಂಚಾಯತ್ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಸದಸ್ಯರಿಗೆ ಮಾಹಿತಿ ನೀಡದೆ ಬೋಗಸ್ ಫೋಟೋಗಳನ್ನು ಲಗತ್ತಿಸಿ ಎಂ.ಬಿ ದಾಖಲೆಗಳನ್ನು ಸಿದ್ಧಪಡಿಸಿ ಲಕ್ಷಾಂತರ ರೂಪಾಯಿ ಲೂಟಿ ಹೊಡೆದಿದ್ದಾರೆ ಎಂದು ಅವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಸೇರಿ ಈ ಅವ್ಯವಹಾರ ನಡೆಸಿದ್ದಾರೆ. ಇವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಈ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.