Bidar | ಎನ್‌ಎಂಎಂಎಸ್ ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಜಿ ಆಹ್ವಾನ
ಬೀದರ್: 2026-27ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2026ರ ಡಿಸೆಂಬರ್‌ನಲ್ಲಿ ನಡೆಯಲಿರುವ ಎನ್‌ಎಂಎಂಎಸ್ (ನ್ಯಾಷನಲ್ ಮೀನ್-ಕಮ್-ಮೆರಿಟ್ ಸ್ಕಾಲರ್‌ಶಿಪ್) ವಿದ್ಯಾರ್ಥಿವೇತನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬೀದರ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಚಾರ್ಯರು ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳ ವಿದ್ಯಾರ್ಥಿಗಳು ಮತ್ತು ಕುಟುಂಬದ ವಾರ್ಷಿಕ ಆದಾಯ ₹3.5 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು ತಮ್ಮ ಸಂಬಂಧಿಸಿದ ಶಾಲೆಯ ಲಾಗಿನ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯು ಕನ್ನಡ, ಇಂಗ್ಲಿಷ್, ಮರಾಠಿ, ಉರ್ದು ಹಾಗೂ ತೆಲುಗು ಮಾಧ್ಯಮಗಳಲ್ಲಿ ನಡೆಯಲಿದೆ.
ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ವಿದ್ಯಾರ್ಥಿಗಳಿಗೆ 9, 10, 11 ಹಾಗೂ 12ನೇ ತರಗತಿಯ ವ್ಯಾಸಂಗದ ಅವಧಿಯಲ್ಲಿ ಪ್ರತಿ ವರ್ಷ ₹12 ಸಾವಿರ ವಿದ್ಯಾರ್ಥಿವೇತನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳ ಪೋಷಕರು ಸಂಬಂಧಿಸಿದ ಶಾಲೆಯ ಮುಖ್ಯಗುರುಗಳನ್ನು ಸಂಪರ್ಕಿಸಿ ಪರೀಕ್ಷೆಗೆ ನೋಂದಣಿ ಮಾಡಿಸಬೇಕು. 8ನೇ ತರಗತಿ ಹೊಂದಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯಗುರುಗಳು ಪರೀಕ್ಷೆಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳಿಂದ ನಿಗದಿತ ಶುಲ್ಕ ಹಾಗೂ ಅಗತ್ಯ ದಾಖಲೆಗಳನ್ನು ಪಡೆದು, ಇಲಾಖೆಯ ವೆಬ್‌ಸೈಟ್ kseeb.karnataka.gov.in ಮೂಲಕ ಅ. 30ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೀದರ್ ಡಯಟ್ ಉಪನ್ಯಾಸಕರು, ಬಿಇಒ ಕೇಂದ್ರದ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಶಿವಾಜಿ ಧನೆ ಅವರನ್ನು (ದೂರವಾಣಿ: 99023 93103) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.