ಬೀದರ್ ಎಟಿಎಂ ದರೋಡೆ ಪ್ರಕರಣ : ಒಂದುವರೆ ವರ್ಷದ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ
ಬೀದರ್ : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಹೃದಯ ಭಾಗದಲ್ಲಿರುವ ಎಸ್‌ಬಿಐ ಬ್ಯಾಂಕ್ ಬಳಿ ಎಟಿಎಂ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 83 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆ ನಡೆದದ್ದು ಹೇಗೆ? :
2025ರ ಜ.16ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ನಗರದ ಹೃದಯ ಭಾಗದಲ್ಲಿರುವ ಎಸ್‌ಬಿಐ ಬ್ಯಾಂಕ್‌ನಿಂದ ಇಬ್ಬರು ಎಟಿಎಂ ಸಿಬ್ಬಂದಿ ಹಣ ಸಾಗಿಸುವ ವಾಹನದ ಮೂಲಕ ಎಟಿಎಂಗೆ ಹಣ ತುಂಬಲು ಹೊರಟಿದ್ದರು. ಬ್ಯಾಂಕ್‌ನಿಂದ ಹಣ ಪಡೆದು ವಾಹನದ ಬಳಿ ಬರುತ್ತಿದ್ದಂತೆ ಬೈಕ್‌ನಲ್ಲಿ ಬಂದ ಇಬ್ಬರು ದರೋಡೆಕೋರರು ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 83 ಲಕ್ಷ ರೂ. ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು.
ದರೋಡೆಕೋರರು ಬೈಕ್‌ನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಬಳಿಕ ಬೀದರ್‌ನಿಂದ ಹೈದರಾಬಾದ್‌ಗೆ ತೆರಳಿದ್ದ ಆರೋಪಿಗಳು, ಅಲ್ಲಿಂದ ಖಾಸಗಿ ಬಸ್ ಮೂಲಕ ರಾಯಪುರಕ್ಕೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದರು ಎನ್ನಲಾಗಿದೆ. ಬಸ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬೀಳುವ ಭೀತಿಯಿಂದ ಮತ್ತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.
ಈ ವೇಳೆ ಆರೋಪಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬೆಮ್ಮಳಖೇಡಾ ನಿವಾಸಿ ಗಿರಿ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಲಾಡಗೇರಿ ನಿವಾಸಿ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಪ್ರಕರಣದ ತನಿಖೆ ಮುಂದುವರಿದಿದ್ದು, ಬಂಧಿತ ಆರೋಪಿಗಳಿಂದ ದರೋಡೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.