Bidar | ಬ್ರಿಮ್ಸ್ ನಲ್ಲಿ ವೈದ್ಯರ ಮೇಲೆ ಹಲ್ಲೆ : ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ
Update: 2026-05-22 20:29 IST
ಬೀದರ್ : ಜಿಲ್ಲಾಸ್ಪತ್ರೆ ಬ್ರಿಮ್ಸ್‌ನಲ್ಲಿ ನಿನ್ನೆ ತಡರಾತ್ರಿ ಕೆಲವರು ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಖಂಡನೀಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳುವ ಹಕ್ಕಿಲ್ಲ. ಇಂತಹ ಘಟನೆಗಳು ವೈದ್ಯರ ಆತ್ಮಸ್ಥೈರ್ಯ ಕುಗ್ಗಿಸುವಂತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆಗೆ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.