Bidar | ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಭೀಮರಾಜ್ ಸೇನಾ ಆಗ್ರಹ
ಬೀದರ್: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ಕುರಿತು ಉನ್ನತ ಮಟ್ಟದ ಮತ್ತು ಸ್ವತಂತ್ರ ತನಿಖೆ ನಡೆಸಬೇಕು. ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡು, ಅವರ ಸಂವಿಧಾನಬದ್ಧ ಹಾಗೂ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿ ಭೀಮರಾಜ್ ಸೇನಾ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪರೀಕ್ಷಾ ವ್ಯವಸ್ಥೆಯ ಲೋಪಗಳಿಂದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವುದು ಖಂಡನೀಯ ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಆಲಿಸುವ ಬದಲು ಬಲಪ್ರಯೋಗದಿಂದ ಅವರ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವದ ಮೂಲಭೂತ ಮೌಲ್ಯಗಳಿಗೆ ವಿರುದ್ಧವಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ಸರ್ಕಾರ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಲಾಗಿದೆ.
ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಹೋರಾಟವನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವೂ ಖಂಡನೀಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳನ್ನು ದಮನಿಸುವ ಬದಲು ಸಂವಿಧಾನಬದ್ಧ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ತನಿಖಾ ಆಯೋಗ ರಚಿಸಿ, ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಅಲ್ಲದೆ, ಅನ್ಯಾಯವಾಗಿ ಪ್ರಕರಣ ದಾಖಲಿಸಲಾದ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳನ್ನು ಮರುಪರಿಶೀಲಿಸಿ ನಿರಪರಾಧಿಗಳಿಗೆ ನ್ಯಾಯ ಒದಗಿಸಬೇಕು. ಕೇಂದ್ರ ಶಿಕ್ಷಣ ಸಚಿವಾಲಯದ ಆಡಳಿತಾತ್ಮಕ ಹಾಗೂ ನೈತಿಕ ಹೊಣೆಗಾರಿಕೆಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹರ್ಷಿತ್ ದಾಂಡೇಕರ್, ಜೈಪಾಲ್, ಪ್ರಹ್ಲಾದ್, ಅಶೋಕ್ ಬಾವಿದೊಡ್ಡಿ, ರಾಘವೇಂದ್ರ, ಆಕಾಶ್, ಶಿವಕುಮಾರ್, ಸಾಯಿಕುಮಾರ್, ಹಾಗೂ ಅಜಯ್‌ಕುಮಾರ್ ಇದ್ದರು.