Bidar | ಜಿಪಂ ಯೋಜನಾ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ
ಬೀದರ್: ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ (ಹೆಚ್ಚುವರಿ ಪ್ರಭಾರ) ಸೂರ್ಯಕಾಂತ್ ಬಿರಾದಾರ್ ಅವರ ವಿರುದ್ಧ ಭ್ರಷ್ಟಾಚಾರ, ಕರ್ತವ್ಯಲೋಪ, ಅಧಿಕಾರ ದುರುಪಯೋಗ ಹಾಗೂ ಸಿಬ್ಬಂದಿಗಳ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಅವರನ್ನು ತಕ್ಷಣ ಅಮಾನತುಗೊಳಿಸಿ ಎಸ್‌ಐಟಿ ತನಿಖೆ ನಡೆಸುವಂತೆ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಶನಿವಾರ ಸಲ್ಲಿಸಿದ ಮನವಿಯಲ್ಲಿ, ಸೂರ್ಯಕಾಂತ್ ಬಿರಾದಾರ್ ಅವರು ಮೂಲತಃ ಕೃಷಿ ಇಲಾಖೆಯ ಉಪನಿರ್ದೇಶಕರಾಗಿದ್ದರೂ, ಹೆಚ್ಚುವರಿ ಪ್ರಭಾರದಲ್ಲಿ ಜಿಲ್ಲಾ ಪಂಚಾಯತ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬರ ಪರಿಸ್ಥಿತಿಯಲ್ಲಿ ಕೃಷಿ ಇಲಾಖೆಗೆ ಅಧಿಕಾರಿಗಳ ಅಗತ್ಯವಿರುವ ಕಾರಣ ಅವರನ್ನು ಮೂಲ ಇಲಾಖೆಗೆ ವಾಪಸ್ ಕಳುಹಿಸಬೇಕು ಎಂದು ಆಗ್ರಹಿಸಲಾಗಿದೆ.
ಜಿಲ್ಲಾ ಪಂಚಾಯತ್‌ನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ಸಂದರ್ಭದಲ್ಲಿಯೂ ಸಿಬ್ಬಂದಿಗಳೊಂದಿಗೆ ದೌರ್ಜನ್ಯ ನಡೆಸಿದ ಆರೋಪಗಳಿದ್ದವು. ಈಗಲೂ ಸಿಬ್ಬಂದಿಗಳ ಮೇಲೆ ಒತ್ತಡ ಹೇರುತ್ತಿದ್ದು, ಉಸ್ತುವಾರಿ ಸಚಿವರು ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಉದ್ಯೋಗ ಖಾತ್ರಿ ಯೋಜನೆಯಡಿ ತಾಂತ್ರಿಕ ಸಹಾಯಕರ ನೇಮಕಾತಿ ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಯ ಹೊರಗುತ್ತಿಗೆ ಸಂಸ್ಥೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಟೆಂಡರ್‌ನಲ್ಲಿ ಎಲ್-1 ಅರ್ಹತೆ ಪಡೆದ ಸಂಸ್ಥೆಗೆ ಅವಕಾಶ ನೀಡದೆ ನಿಯಮ ಉಲ್ಲಂಘಿಸಿ ಮತ್ತೊಂದು ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ ಎಂದು ದೂರಲಾಗಿದೆ.
ಸಿಬ್ಬಂದಿಗಳೊಂದಿಗೆ ಅಸಭ್ಯವಾಗಿ ವರ್ತಿಸುವುದು, ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುವುದು ಹಾಗೂ ರಾತ್ರಿ ವೇಳೆ ವಾಟ್ಸಾಪ್ ಸಂದೇಶ ಕಳುಹಿಸುವುದು ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಮೊಬೈಲ್ ಕರೆಗಳು ಮತ್ತು ವಾಟ್ಸಾಪ್ ಸಂದೇಶಗಳ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.
ದಿಶಾ ಸಭೆಗಳ ವೆಚ್ಚದಲ್ಲಿ ಬೋಗಸ್ ಬಿಲ್‌ಗಳ ಮೂಲಕ ಹಣ ದುರುಪಯೋಗ, ಉದ್ಯೋಗ ಖಾತ್ರಿ ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಗಳಲ್ಲಿ ಅಕ್ರಮ ನಡೆಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಅವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿರುವ ಓಂಪ್ರಕಾಶ್ ರೊಟ್ಟೆ, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರನ್ನು ಬಳಸಿಕೊಂಡು ಸಿಬ್ಬಂದಿಗಳ ಮೇಲೆ ಒತ್ತಡ ಹೇರುತ್ತಿರುವ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಎಲ್ಲಾ ಆರೋಪಗಳ ಕುರಿತು ಎಸ್‌ಐಟಿ ಮೂಲಕ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.