×
Ad

ಬೀದರ್‌| ಗೋಹತ್ಯೆ ಶಂಕೆ : ಓರ್ವನ ಬಂಧನ

Update: 2026-05-29 22:20 IST

ಹುಲಸೂರ್ : ಪಟ್ಟಣದಲ್ಲಿ ಗೋಹತ್ಯೆ ನಡೆಸಲಾಗಿದೆ ಎಂಬ ಶಂಕೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿರುವ ಘಟನೆ ಗುರುವಾರ ನಡೆದಿದೆ.

ಗೋಹತ್ಯೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಭಜರಂಗದಳದ ಕಾರ್ಯಕರ್ತರು ಠಾಣೆಗೆ ತೆರಳಿ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಪಿಎಸ್‌ಐ ಶಿವಪ್ಪ ಮೇಟಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳದಲ್ಲಿ ದೊರೆತ ಮಾಂಸದ ತುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅದು ಯಾವ ಪ್ರಾಣಿಯದ್ದು ಎಂಬುದು ದೃಢಪಟ್ಟಿಲ್ಲ.

ಸ್ಥಳಕ್ಕೆ ಡಿವೈಎಸ್‌ಪಿ ಮಾಡೋಳಪ್ಪ ಹಾಗೂ ಸಿಪಿಐ ಅಲಿಸಾಬ್ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕನ ನಡೆಸಿದರು. ಪಶು ವೈದ್ಯಾಧಿಕಾರಿಗಳು ಮಾಂಸವನ್ನು ಪರಿಶೀಲನೆಗೆ ಕಳುಹಿಸಿದ್ದು, ವರದಿ ಬಂದ ಬಳಿಕ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಫಾರ್ ಖುರೇಷಿ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ವಿರುದ್ಧ ಪಶು ರಕ್ಷಣಾ ಪ್ರತಿಬಂಧಕ ಕಾಯ್ದೆಯ ಕಲಂ 4 ಮತ್ತು 12 ಹಾಗೂ ಬಿಎನ್‌ಎಸ್ ಕಾಯ್ದೆಯ 325 ಮತ್ತು 271ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿವೈಎಸ್‌ಪಿ ಮಾಡೋಳಪ್ಪ ಅವರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು.  ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ಪಟ್ಟಣದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಡಿವೈಎಸ್‌ಪಿ ಮಾಡೋಳಪ್ಪ ಅವರು ಮನವಿ ಮಾಡಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News