×
Ad

Bidar | ಜು.3ರಂದು ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ: ರಮೇಶ್ ಡಾಕುಳಗಿ‌

"ಬೇಡಿಕೆ ಈಡೇರದಿದ್ದರೆ ಪರ್ಯಾಯ ರಾಜಕೀಯದ ಬಗ್ಗೆ ಯೋಚಿಸಲಾಗುವುದು"

Update: 2026-06-25 20:09 IST

ಬೀದರ್: ಭೂಮಿ, ವಸತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಉದ್ಯೋಗ ನೇಮಕಾತಿ ಹಾಗೂ ವಿಶೇಷ ಘಟಕ ಯೋಜನೆಗೆ ಏಕಗವಾಕ್ಷಿ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ಜು.3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ರಮೇಶ್ ಡಾಕುಳಗಿ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ಸಮಗ್ರ ಸಬಲೀಕರಣಕ್ಕಾಗಿ ಈ ಸಮಾವೇಶ ಆಯೋಜಿಸಲಾಗುತ್ತಿದೆ ಎಂದರು.

ದಲಿತ ಸಮುದಾಯಗಳ ಅಭಿವೃದ್ಧಿಗಾಗಿ ಜಾರಿಯಲ್ಲಿರುವ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಗಳ ಅನುದಾನವನ್ನು ಉದ್ದೇಶಿತ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು. ಭೂರಹಿತ ಕುಟುಂಬಗಳಿಗೆ ಭೂಮಿ ಒದಗಿಸಬೇಕು, ವಸತಿಹೀನರಿಗೆ ಮನೆ ಕಲ್ಪಿಸಬೇಕು. ಅಲ್ಲದೆ, ಸರ್ಕಾರಿ ಇಲಾಖೆಗಳಲ್ಲಿನ ಬ್ಯಾಕ್‌ಲಾಗ್ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.

ವಿಶೇಷ ಘಟಕ ಯೋಜನೆಯ ಅನುದಾನವನ್ನು ನಿಯಮಬಾಹಿರವಾಗಿ ಬೇರೆ ಉದ್ದೇಶಗಳಿಗೆ ಬಳಸುವುದನ್ನು ನಿಲ್ಲಿಸಿ, ಏಕಗವಾಕ್ಷಿ ನೀತಿ ಜಾರಿಗೊಳಿಸುವ ಮೂಲಕ ದಲಿತರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ದಲಿತಪರ ಸಂಘಟನೆಗಳ ಮುಖಂಡರು ಮತ್ತು ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.

ಹಿರಿಯ ದಲಿತ ಮುಖಂಡ ಅನಿಲಕುಮಾರ್ ಬೆಲ್ದಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಸೌಲಭ್ಯಗಳು, ಹಾಸ್ಟೆಲ್ ಕ್ಯಾಂಪಸ್‌ಗಳ ನಿರ್ಮಾಣ, ಭೂ ಒಡೆತನ ಯೋಜನೆ ಜಾರಿ ಹಾಗೂ ಪಿಟಿಸಿಎಲ್ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಬಾಬುರಾವ್ ಪಾಸ್ವಾನ್ ಮಾತನಾಡಿ, ರಾಜ್ಯ ಸರ್ಕಾರ ದಲಿತ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಜು.3ರಂದು ಡಿಎಸ್‌ಎಸ್ ಹಿರಿಯ ಮುಖಂಡ ಮಾವಳ್ಳಿ ಶಂಕರ್ ಹಾಗೂ ಇತರ ಮುಖಂಡರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ್ ಮಾಳಗೆ, ದಲಿತ ಸಂಘರ್ಷ ಸಮಿತಿಯ ವಿವಿಧ ಪದಾಧಿಕಾರಿಗಳಾದ ರಮೇಶ್ ಮಂದಕನಳ್ಳಿ, ಆರ್.ಪಿ ರಾಜಾ, ಸುನಿಲ್ ಸಂಗಮ, ರಾಜಕುಮಾರ್ ಬನ್ನೇರ್‌, ರಂಜಿತಾ, ಜಗದೇವಿ ಭಂಡಾರಿ, ದೈವಶೀಲಾ ಹಾಗೂ ರುಕ್ಮೀಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News