ಬೀದರ್ | ಮೈಲೂರಿನ ಬಾಲಕಿಯರ ವಸತಿ ನಿಲಯ ಸ್ಥಳಾಂತರಕ್ಕೆ ವಿರೋಧಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ
ಬೀದರ್ : ನಗರದ ಮೈಲೂರಿನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಘೋಡಂಪಳ್ಳಿಗೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಸಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಶುಕ್ರವಾರ ಸಲ್ಲಿಸಿದ ಮನವಿಯಲ್ಲಿ, ಘೋಡಂಪಳ್ಳಿ ಗ್ರಾಮವು ಬೀದರ್ ನಗರದಿಂದ ಸುಮಾರು 15 ಕೀ.ಮೀ ದೂರದಲ್ಲಿದ್ದು, ಸಮರ್ಪಕ ಸಾರಿಗೆ ಸಂಪರ್ಕವಿಲ್ಲದ ನಿರ್ಜನ ಪ್ರದೇಶವಾಗಿದೆ. ಅಲ್ಲದೆ, ತೆಲಂಗಾಣ ಗಡಿಭಾಗ, ಅರಣ್ಯ ಪ್ರದೇಶ ಹಾಗೂ ಸ್ಮಶಾನದ ಸಮೀಪ ಇರುವುದರಿಂದ ವಿದ್ಯಾರ್ಥಿನಿಯರ ಸುರಕ್ಷತೆ ದೃಷ್ಟಿಯಿಂದ ವಸತಿ ನಿಲಯ ಸ್ಥಳಾಂತರ ಸೂಕ್ತವಲ್ಲ ಎಂದು ಉಲ್ಲೇಖಿಸಲಾಗಿದೆ.
ಘೋಡಂಪಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಲಕಿಯರ ವಸತಿ ನಿಲಯವನ್ನು ಅಲ್ಲಿಗೆ ಸ್ಥಳಾಂತರಿಸುವುದು ವಿದ್ಯಾರ್ಥಿನಿಯರ ಶಿಕ್ಷಣ ಹಾಗೂ ಭದ್ರತೆಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಂಸದ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಜನಸ್ಪಂದನ ಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಘೋಡಂಪಳ್ಳಿಯ ನಿಗದಿತ ಕಟ್ಟಡಕ್ಕೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು. ಬಾಲಕಿಯರ ವಸತಿ ನಿಲಯ ನಡೆಸಲು ಆ ಸ್ಥಳ ಸೂಕ್ತವಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಇದೀಗ ಆಯುಕ್ತರ ಮುಂದಿನ ನಿರ್ದೇಶನ ಬರುವವರೆಗೆ ವಸತಿ ನಿಲಯವನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಿಳಿಸಲಾಗಿದೆ. ಆದ್ದರಿಂದ, ವಸತಿ ನಿಲಯವನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯಬೇಕು ಎಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಚಾಲಕ ಧನರಾಜ್ ಮುಸ್ತಾಪೂರ್, ಜಿಲ್ಲಾ ಸಹ ಸಂಚಾಲಕ ವಿಜಯಕುಮಾರ್ ಐಹೊಳೆ, ಜೈಪ್ರಕಾಶ್ ಅಷ್ಟೂರೆ, ಹಾಗೂ ಬಸವರಾಜ್ ಭಾವಿದೊಡ್ಡಿ ಅವರು ಇದ್ದರು.