×
Ad

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಿ: ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Update: 2025-02-06 22:59 IST

ಬೀದರ್: ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಮತ್ತು ಕೇಂದ್ರ ಪುರಸ್ಕರ ಯೋಜನೆಗಳು ಹಾಗೂ ಮಕ್ಕಳ ರಕ್ಷಣಾ ಸೇವೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಪೋಕ್ಸೋ, ಬಾಲ್ಯವಿವಾಹ, ನಾಪತ್ತೆ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮಹರಿಸಿ ಕಾರ್ಯನಿರ್ವಹಿಸಬೇಕು ಎಂದರು.

ಪ್ರಧಾನಮಂತ್ರಿ ಮಾತೃವರ್ದನಾ ಯೋಜನೆಯಡಿ ಕಡ್ಡಾಯವಾಗಿ ಮನೆ ಮನೆ ತೆರಳಿ ಮೊದಲ ಪ್ರಸವ ಗರ್ಭಿಣಿ, ಬಾಣಂತಿ ಫಲಾನುಭವಿಗಳ ನೋಂದಣಿ ಮಾಡಿಕೊಳ್ಳಬೇಕು. ಅವರಿಗೆ ತಾಯಿ ಕಾರ್ಡ್ ವಿತರಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು. ಸ್ವಚ್ಚತಾ, ಗೃಹ ಯೋಜನೆಯಡಿ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಮಹಿಳೆಯರಿಗೆ ಆಶ್ರಯ, ಆಹಾರ, ಬಟ್ಟೆ, ತರಬೇತಿ ಸೇರಿದಂತೆ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಬಲಗೊಳ್ಳುವಂತೆ ನೋಡಿಕೊಳ್ಳಬೇಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಿಗೆ ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ತೂಕ, ಎತ್ತರ ಹಾಗೂ ಎಡಗೈ ತೋಳಿನ ಅಳತೆ ಅಥವಾ ಮಾಪನ ಮಾಡಿ ಅಪೌಷ್ಠಿಕ ಮಕ್ಕಳ ಪಟ್ಟಿ ಸಿದ್ಧಪಡಿಸಬೇಕು. ಈ ಅಪೌಷ್ಠಿತ ಮಕ್ಕಳ ಮೇಲೆ ಹೆಚ್ಚಿನ ನೀಗಾವಹಿಸಬೇಕು. ಪೋಷಣ ಅಭಿಯಾನ ಯೋಜನೆಯಡಿ 6 ವರ್ಷದವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಠಿಕತಾ ಮಟ್ಟವನ್ನು ಸುಧಾರಿಸಬೇಕು ಎಂದು ಹೇಳಿದರು.

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ರಕ್ಷಣಾ ಘಟಕ ವತಿಯಿಂದ ನಡೆಯುವ ವಿವಿಧ ಯೋಜನೆಗಳಾದ ಮಿಷನ್ ಶಕ್ತಿ ಯೋಜನೆ, ಒನ್ ಸ್ಟಾಪ್ ನಂಬರ್ ಯೋಜನೆ, ಬಾಲ್ಯ ವಿವಾಹ ಇನ್ನಿತರ ಯೋಜನೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ಅಧಿಕಾರಿ ಕಿಶೋರ್ ದುಬೆ, ಯೋಜನಾ ನಿರ್ದೇಶಕ ಜಗನ್ನಾಥ್ ಮೂರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಜಿಯಾ ಬಳಬಟ್ಟಿ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗುರುರಾಜ್ ಹಾಗೂ ತಾಲ್ಲೂಕ ಮಟ್ಟದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ, ಸಂಘ ಸಂಸ್ಥೆಗಳ ಪದಾಧಿಕಾರಿ, ಜಿಲ್ಲಾ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿ ಸೇರಿದಂತೆ ಇತರೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News