Bidar | ಶಿಕ್ಷಕರ ನೇಮಕಾತಿ ಗೆಜೆಟ್ ತಿದ್ದುಪಡಿ ಆಗ್ರಹ: ಅಲ್ಪಸಂಖ್ಯಾತ ಭಾಷೆಗಳಿಗೂ ಪ್ರಶ್ನೆಪತ್ರಿಕೆ ನೀಡಲು ಅಭ್ಯರ್ಥಿಗಳ ಒತ್ತಾಯ

ವಯೋಮಿತಿ ಹೆಚ್ಚಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ

Update: 2026-07-29 16:47 IST

ಬೀದರ್: ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯು ಜುಲೈ 14ರಂದು ಪ್ರಕಟಿಸಿದ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಗೆಜೆಟ್‌ನಲ್ಲಿ ಅಲ್ಪಸಂಖ್ಯಾತ ಭಾಷೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಹೊಸ ಗೆಜೆಟ್‌ನಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಕೇವಲ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನೀಡುವ ಪ್ರಸ್ತಾವನೆ ಮಾಡಲಾಗಿದೆ. ಇದರಿಂದ ಉರ್ದು ಸೇರಿದಂತೆ ಅಲ್ಪಸಂಖ್ಯಾತ ಭಾಷೆಗಳ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದ್ದು, ಪ್ರಶ್ನೆಪತ್ರಿಕೆಗಳನ್ನು ಅಭ್ಯರ್ಥಿಗಳ ಮಾತೃಭಾಷೆಯಲ್ಲಿಯೂ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ, ಮೂರನೇ ಪ್ರಶ್ನೆಪತ್ರಿಕೆಯಲ್ಲಿ ಪ್ರಸ್ತುತ ಪ್ರಸ್ತಾವಿಸಿರುವ 50 ಅಂಕಗಳನ್ನು ಇಂಗ್ಲಿಷ್ ಹಾಗೂ 50 ಅಂಕಗಳನ್ನು ಕನ್ನಡಕ್ಕೆ ಮೀಸಲಿಡುವ ಬದಲು, ಹಿಂದಿನ ನೇಮಕಾತಿಯಂತೆ ಪೂರ್ಣ 100 ಅಂಕಗಳನ್ನು ಅಭ್ಯರ್ಥಿಗಳ ಮಾತೃಭಾಷೆಗೆ ಮೀಸಲಿಡಬೇಕು ಎಂದು ಆಗ್ರಹಿಸಲಾಗಿದೆ.

ಹೊಸ ಗೆಜೆಟ್‌ನಲ್ಲಿ ಶಿಕ್ಷಕರ ನೇಮಕಾತಿಗೆ ನಿಗದಿಪಡಿಸಿರುವ ವಯೋಮಿತಿಯನ್ನು ಕಡಿಮೆ ಮಾಡಿರುವುದಕ್ಕೂ ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದರಿಂದ ಅನೇಕ ಅರ್ಹ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಿಂದ ವಂಚಿತರಾಗುವ ಸಾಧ್ಯತೆ ಇದೆ. ಆದ್ದರಿಂದ ವಯೋಮಿತಿಯನ್ನು ಹೆಚ್ಚಿಸಿ ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ಸರ್ಕಾರವು ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಗಣಿಸಿ, ಅಲ್ಪಸಂಖ್ಯಾತ ಭಾಷೆಗಳ ಹಕ್ಕುಗಳನ್ನು ಸಂರಕ್ಷಿಸುವುದರೊಂದಿಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ನ್ಯಾಯಸಮ್ಮತ ಹಾಗೂ ಸಮಾನತೆಯ ಆಧಾರದ ಮೇಲೆ ನಡೆಸಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಅಸ್ಮಾ ರೂಹಿ, ಸಾಲಿಹಾ ಬೇಗಂ, ತಬಸ್ಸುಮ್ ಜಬೀನ್, ಶೈಸ್ತಾ ನಸ್ರೀನ್ ಸೇರಿದಂತೆ ಹೆಚ್ಚಿನ ಸಂಖ್ಯೆಯ ಮಹಿಳಾ ಅಭ್ಯರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News